×
Ad

ಉಡುಪಿ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಿ: ಪಿಯುಷ್ ರಂಜನ್

Update: 2022-06-13 21:01 IST

ಉಡುಪಿ : ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೆ ಈಗಾಗಲೇ ಕೈಗೊಂಡಿರುವ ಕ್ರಮಗಳ ಜೊತೆಗೆ ಇನ್ನೂ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ರಕ್ಷಣಾ ಸಚಿವಾಲಯದ ನಿರ್ದೇಶಕ ಪಿಯುಷ್ ರಂಜನ್ ಹೇಳಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನ ಯೋಜನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಜಿಲ್ಲೆಯಲ್ಲಿ ಮಳೆ ನೀರು ಕೊಯ್ಲು, ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ನಿರ್ಮಾಣ, ಪ್ಲಾಂಟೇಶನ್, ಇಂಗು ಗುಂಡಿಗಳ ರಚನೆ, ಜಲ ಮೂಲಗಳ ಸಂರಕ್ಷಣೆ ಕುರಿತಂತೆ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ನಗರ ಪ್ರದೇಶದಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗ  ಮಳೆ ನೀರು ಕೊಯ್ಲು ಘಟಕ ಅಳವಡಿಕೆ ಬಗ್ಗೆ ಸೂಚಿಸುವ ಕಡ್ಡಾಯ ನಿಯಮಗಳ ಸರಿಯಾದ ಪಾಲನೆ ಆಗುತ್ತಿರುವ ಬಗ್ಗೆ ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಹಾತ್ಮ ಗಾಂಧೀ ಉದ್ಯೋಗ ಖಾತ್ರಿ ಯೋಜನೆಯಡಿ ಜಲಶಕ್ತಿ ಅಭಿಯಾನ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅನುಷ್ಠಾನಗೊಳಿಸುವಂತೆ ಹಾಗೂ ಅಂತರ್ಜಲ ವೃದ್ಧಿಯ ಪ್ರಯೋಜನಗಳ ಕುರಿತಂತೆ ಸಾರ್ವಜನಿಕ ಜಾಗೃತಿ ಮತ್ತು ಅರಿವು  ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜಿಸುವಂತೆ ಹಾಗೂ ತ್ಯಾಜ್ಯ ನೀರಿನ ಸಮರ್ಪಕ ಬಳಕೆ ಮಾಡುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ,  ಜಿಲ್ಲೆಯಲ್ಲಿ ೧೪೦೦ಕ್ಕೂ ಅಧಿಕ ಕಿಂಡಿ ಅಣೆಕಟ್ಟುಗಳ ಮೂಲಕ ಅಂತರ್ಜಲ ವೃದ್ಧಿಗೆ ಕ್ರಮ ಕೈಗೊಳ್ಳ ಲಾಗಿದೆ. ಅಲ್ಲದೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆಗಳ  ಅಭಿವೃದ್ಧಿ ಹಾಗೂ ತೆರೆದ ಬಾವಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.ಈ ಹಿಂದೆ ಜಿಲ್ಲೆಯಲ್ಲಿ ೧೮೦ ಅಡಿ ಕೆಳಗೆ ದೊರೆಯುತಿದ್ದ ನೀರಿನ ಮಟ್ಟ ಪ್ರಸ್ತುತ, ೧೬೦ ಅಡಿಗಳಿಗೆ ತಲುಪಿದೆ ಎಂದು ವಿವರಿಸಿದರು.

ಸಭೆಯಲ್ಲಿ ಕೇಂದ್ರದ ಜಲಶಕ್ತಿ ಅಭಿಯಾನ ಯೋಜನೆಯ ವಿಜ್ಞಾನಿ ಹಾಗೂ ತಾಂತ್ರಿಕ ಅಧಿಕಾರಿ ಡಾ.ಲಕ್ಷ್ಮೀ ನಾರಾಯಣ್ ತುಕ್ರಾಲ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹಾಗೂ  ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News