×
Ad

ಸಿಇಟಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡಬೇಡಿ: ಡಿಸಿ ಕೂರ್ಮಾರಾವ್

Update: 2022-06-13 21:11 IST

ಉಡುಪಿ, ಜೂ.೧೩: ಇದೇ ಜೂನ್ ೧೬ ಮತ್ತು ೧೭ರಂದು ನಡೆಯುವ ೨೦೨೨ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಯಾವುದೇ ಅಕ್ರಮಗಳು ನಡೆಯದಂತೆ, ನ್ಯಾಯಸಮ್ಮತವಾಗಿ ಮತ್ತು ಸುಗಮವಾಗಿ ಯಾವುದೇ ಲೋಪದೋಷಗಳಿಲ್ಲದೇ ನಡೆಸಲು ಸರಕಾರ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸು ವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ೨೦೨೨ನೇ ಸಾಲಿನ ಸಿಇಟಿ ಪರೀಕ್ಷೆ ನಡೆಸುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡುತಿದ್ದರು.

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಒಟ್ಟು ೪೭೦೪ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗಳಿಗೆ ಹಾಜರಾಗಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ ೮ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು. ಸೂಕ್ತ ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಖಜಾನೆ ಯಿಂದ ತೆಗೆದುಕೊಂಡು ಹೋಗಿ ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು,  ತಾಲೂಕಿನ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪ್ರಾಂಶುಪಾಲರನ್ನು ಒಳಗೊಂಡ ೩ ಸದಸ್ಯರ ೪ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಕ್ಕೆ ಸಹಾಯಕ ಆಯುಕ್ತರ ಶ್ರೇಣಿಗೆ ಕಡಿಮೆ ಇಲ್ಲದ ಒಬ್ಬರು ಅಧಿಕಾರಿಯನ್ನು ವೀಕ್ಷಕ ರನ್ನಾಗಿ ನೇಮಿಸಲಾಗುವುದು ಎಂದವರು ತಿಳಿಸಿದರು.

ಪ್ರಶ್ನೆಪತ್ರಿಕೆಗಳನ್ನು ಇಡುವ ಜಿಲ್ಲಾ ಖಜಾನೆಯಲ್ಲಿ ಸಿಸಿಟಿವಿ ಕ್ಯಾಮೆರಾ, ಬಯೋಮೆಟ್ರಿಕ್ ಮೆಷಿನ್ ಮತ್ತು ಬಾರ್ ಕೋಡಿಂಗ್ ವ್ಯವಸ್ಥೆಯನ್ನು ಅಳವಡಿಸುವಂತೆ ಜಿಲ್ಲಾ ಖಜಾನಾಧಿಕಾರಿಗಳಿಗೆ ಸೂಚಿಸಿದ ಕೂರ್ಮಾರಾವ್,  ಎಲ್ಲಾ ಪರೀಕ್ಷಾ ಕೆಂದ್ರಗಳಿಗೆ ಸೂಕ್ತ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಪರೀಕ್ಷಾ ಕೇಂದ್ರಗಳ ಕರ್ತವ್ಯಕ್ಕೆ ನಿಯೋಜಿಸುವ ಮುಖ್ಯ ಅಧೀಕ್ಷಕರು ಬೇಸಿಕ್ ಮೊಬೈಲ್ ಮಾತ್ರ ಬಳಸುವಂತೆ ಮತ್ತು ಉಳಿದ ಸಿಬ್ಬಂದಿಗಳು ಕಡ್ಡಾಯವಾಗಿ ಯಾವುದೇ ಮೊಬೈಲ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ದೋಷರಹಿತವಾಗಿ, ಸುವ್ಯವಸ್ಥಿತ ವಾಗಿ ಮತ್ತು ಸುಗಮವಾಗಿ ನಡೆಯಲು ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಯಾವುದೇ ದೋಷಗಳಿಲ್ಲದೇ ನಡೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ಮೀ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷಾ ಕೇಂದ್ರದ ಸಮೀಪದ ಎಲ್ಲಾ ಝೆರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಕಠಿಣ ಕ್ರಮ: ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಸೋರಿಕೆ ಕುರಿತು ಗೊಂದಲ ಮೂಡಿಸುವ,ನಕಲಿ ಪ್ರಶ್ನೆಪತ್ರಿಕೆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪರೀಕ್ಷಾ ಕೇಂದ್ರದ ಕೊಠಡಿಗಳನ್ನು ಸೂಕ್ತ ರೀತಿಯಲ್ಲಿ ಸ್ಯಾನಟೈಸ್ ಮಾಡುವಂತೆ ಮತ್ತು ಥರ್ಮಲ್ ಸ್ಕ್ಯಾನರ್‌ನೊಂದಿಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೂ ಅವರು ಸೂಚಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಅಪರ ಜಿಲ್ಲಾಧಿಕಾರಿ ವೀಣಾ, ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News