ಜೂನ್ 18 ರ ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿ ಬೃಹತ್ ಜಾಥಾಕ್ಕೆ ಬೆಂಬಲ ಘೋಷಿಸಿದ ದೇವೇಗೌಡ

Update: 2022-06-14 16:30 GMT

ಬೆಂಗಳೂರು, ಜೂ.14: ಪಠ್ಯಪುಸ್ತಕ ಮರು ಪರಿಷ್ಕರಣೆ ಕೈಬಿಡಬೇಕು, ಸಮಿತಿ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜೂ.18ರಂದು ಹಮ್ಮಿಕೊಂಡಿರುವ ಬೃಹತ್ ಹೋರಾಟದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಪ್ರತಿಕ್ರಿಯಿಸಿದ ಅವರು, ಅಂದು ಬೆಂಗಳೂರಿನ ಫ್ರೀಡಂ ಪಾರ್ಕಿನ ಮೈದಾನದಲ್ಲಿ ರಾಜ್ಯ ಒಕ್ಕಲಿಗರ ಸಂಘ, ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ, ದಲಿತ ಸಂಘರ್ಷ ಸಮಿತಿ, ಕನ್ನಡಪರ ಸಂಘಟನೆಗಳು ಒಳಗೊಂಡಂತೆ ಹಲವಾರು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗಿಯಾಗುವುದಾಗಿ ಪ್ರಕಟಿಸಿದ್ದಾರೆ.

ಅಂದಿನ ಪ್ರತಿಭಟನೆಯೂ 150ಕ್ಕೂ ಹೆಚ್ಚು ಮಠಾಧೀಶರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ನಂತರ ಸಮಾವೇಶ ನಡೆಯಲಿದ್ದು, ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಹೋರಾಟಗಾರರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News