ಮೈಸೂರು | ಈ.ಡಿ. ಕಚೇರಿಗೆ ಮುತ್ತಿಗೆ ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮೈಸೂರು, ಜೂ.17: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಈ.ಡಿ., ಐಟಿ ಅಂತ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರನ್ನು ಬೆದರಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮೈಸೂರಿನ ಸಿದ್ಧಾರ್ಥ ನಗರದಲ್ಲಿರುವ ಜಾರಿ ನಿರ್ದೇಶಾನಾಲಯದ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹಾಗೂ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಕಾಂಗ್ರಸ್ ಕಾರ್ಯಕರ್ತರು ನಗರದ ಪುರಭವನದ ಮುಂಭಾಗ ಶುಕ್ರವಾರ ಜಮಾವಣೆಗೊಂಡರು.
ಬಿಜೆಪಿ ಸರಕಾರ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ನಾಯಕರುಗಳನ್ನು ಹೆದರಿಸಲು ಈ.ಡಿ., ಐಟಿ ಅಸ್ತ್ರ ಉಪಯೋಗಿಸುತ್ತಿದೆ. ಇವರ ಆಡಳಿತಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರುಗಳಾದ ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕರುಗಳಾದ ಎಂ.ಕೆ.ಸೋಮಶೇಖರ್, ವಾಸು, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಕೆಪಿಸಿಸಿ ಸದಸ್ಯ ಅಕ್ಬರ್ ಅಲಿ, ಕಾಂಗ್ರೆಸ್ ಮುಖಂಡರುಗಳಾದ ಶಿವಪ್ರಸಾದ್, ಸೋಮಶೇಖರ್, ಮಾರುತಿ ನಂಜನಗೂಡು ನಗರಸಭಾ ಸದಸ್ಯ ಎಸ್.ಪಿ.ಮಹೇಶ್, ಪುಷ್ಪಲತಾ ಟಿ.ಬಿ. ಚಿಕ್ಕಣ್ಣ, ನಗರ ಪಾಲಿಕೆ ಸದಸ್ಯ ಲೋಕೇಶ್ ಪ್ರಿಯಾ, ಪ್ರಶಾಂತ್ ಗೌಡ, ಅಯ್ಯೂಬ್ ಖಾನ್, ಚಂದ್ರಶೇಖರ್, ಶ್ರೀನಾಥ್ ಬಾಬು ಸೇರಿದಂತೆ ನೂರಾರು ಕಾರ್ಯರ್ತರನ್ನು ವಶಕ್ಕೆ ಪಡೆದು 6 ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ಯಲಾಯಿತು.