ಮಂಗಳೂರಿನಿಂದ ಬಜ್ಪೆ-ಕೆಂಜಾರು ವಿಮಾನ ನಿಲ್ದಾಣಕ್ಕೆ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಸೂಚನೆ

Update: 2022-06-25 11:54 GMT
ಫೈಲ್‌ ಫೋಟೊ 

ಮಂಗಳೂರು : ನಗರದಿಂದ ಬಜ್ಪೆ ಕೆಂಜಾರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸ್ ಸಂಪರ್ಕ ಕಲ್ಪಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ರಾಜ್ಯ ಸರಕಾರ ಸೂಚನೆ ನೀಡಿದೆ.

ಬೆಂಗಳೂರಿನಿಂದ ಅಲ್ಲಿನ ವಿಮಾನ ನಿಲ್ದಾಣಕ್ಕೆ ಬಸ್ ಸಂಚಾರ ವ್ಯವಸ್ಥೆಯಿರುವಂತೆಯೇ ಮಂಗಳೂರಿನಲ್ಲೂ ವಿಮಾನ ನಿಲ್ದಾಣಕ್ಕೆ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗೆ ಸಾರಿಗೆ ಸಚಿವ ಶ್ರೀರಾಮುಲು ಅವರ ಸೂಚನೆಯ ಮೇರೆಗೆ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್. ಈ ಬಗ್ಗೆ ಕೆಎಸ್ಸಾರ್ಟಿಸಿ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಕೋವಿಡ್-೧೯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ಕಾರ್ಯನಿರ್ವಹಣೆ ಕಡಿಮೆ ಇರುವುದರಿಂದ 3 ಬಸ್‌ಗಳನ್ನು ಪಡೆದು ಕೆಎಸ್ಸಾರ್ಟಿಸಿಯಿಂದ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ಮುಂದಿನ ಮಂಡಳಿ ಸಭೆಯಲ್ಲಿ ಈ ವಿಚಾರವನ್ನು ಮಂಡಿಸಿ ಸ್ಥಿರೀಕರಣ ಪಡೆಯುವಂತೆ ಅಧೀನ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ.

2011ರಲ್ಲಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಎರಡು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಬಳಿಕ ಪ್ರಯಾಣಿಕರ ಸಂಖ್ಯೆ ಇಳಿಮುಖವಾದ ಹಿನ್ನೆಲೆಯಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಸಾರಿಗೆ ಇಲಾಖೆಯಿಂದ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿಗೆ ಸೂಚನೆ ನೀಡಿರುವುದು ತಿಳಿದು ಬಂದಿದೆ. ಆದರೆ ನಮಗೆ ಇನ್ನೂ ಅಧಿಕೃತ ಸೂಚನೆ ಬಂದಿಲ್ಲ. ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಮುಖ್ಯಸ್ಥರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಯಾವಾಗ ಬಸ್ ಸಂಚಾರ ಆರಂಭಿಸಲಾಗುವುದು ಎಂಬುದನ್ನು ಈಗಲೇ ಹೇಳಲಾಗದು ಎಂದು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News