ವರ್ಷದೊಳಗೆ ‘ಸ್ಮಾರ್ಟ್‍ಸಿಟಿ' ಯೋಜನೆ ಎಲ್ಲ ಕಾಮಗಾರಿ ಪೂರ್ಣಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

Update: 2022-06-26 15:18 GMT

ಹುಬ್ಬಳ್ಳಿ, ಜೂ. 26: ‘ಮುಂದಿನ ಒಂದು ವರ್ಷದ ಅವಧಿಯೊಳಗೆ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್‍ಸಿಟಿ ಯೋಜನೆಯ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರವಿವಾರ ಇಲ್ಲಿನ ಘಂಟಿಕೇರಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‍ಸಿಟಿ ಯೋಜನೆ ಅನುದಾನದಡಿ ನಗರ ಪ್ರದೇಶದ ಬಡವರ್ಗಗಳ ಪ್ರದೇಶದಲ್ಲಿ ಸುಮಾರು 34 ಕೋಟಿ ರೂ.ವೆಚ್ಚದ ವಿವಿಧ ಮೂಲಸೌಕರ್ಯಗಳ ಲೋಕಾರ್ಪಣೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.

2014-15ರಿಂದ ಪ್ರಾರಂಭವಾಗಿ 2020ರ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ಹುಬ್ಬಳ್ಳಿ ಧಾರವಾಡ ಸ್ಮಾರ್ಟ್‍ಸಿಟಿ ಯೋಜನೆಯಡಿ ಈಗಾಗಲೇ 555 ಕೋಟಿ ರೂ.ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ. ರಸ್ತೆ, ಒಳಚರಂಡಿ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಇದೇ ಆರ್ಥಿಕ ವರ್ಷದ ಮಾರ್ಚ್ 31ರೊಳಗೆ ಮುಗಿಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ' ಎಂದು ಹೇಳಿದರು.

‘ಸ್ಮಾರ್ಟ್‍ಸಿಟಿ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು. ಯೋಜನಾ ಬದ್ಧವಾಗಿ ಕೆಲಸ ಮಾಡಬೇಕು. ಸಮಯ ಹಾಗೂ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು, ಗುಣಮಟ್ಟ ಕಾಪಾಡಿಕೊಳ್ಳದ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಬೇಕು' ಎಂದು ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗ ನಮ್ಮ ದೇಶದ ಜನಸಂಖ್ಯೆ 30 ಕೋಟಿ ಇತ್ತು, ಸ್ವಾತಂತ್ರ್ಯಾನಂತರ ಈಗ ಈ ಪ್ರಮಾಣ 130 ಕೋಟಿಗೆ ಏರಿದೆ. ನಗರೀಕರಣದಿಂದಾಗಿ ಶೇ.14ರಷ್ಟಿದ್ದ ನಗರ ಪ್ರದೇಶದ ಜನಸಂಖ್ಯೆಯ ಪ್ರಮಾಣ ಶೇ.37ಕ್ಕೆ ಏರಿಕೆಯಾಗಿದೆ. ಪ್ರಧಾನಿಯವರು ಸ್ಮಾರ್ಟ್‍ಸಿಟಿ ಯೋಜನೆ ಪ್ರಾರಂಭಿಸಿದ್ದು, ರಾಜ್ಯದ 7 ನಗರಗಳನ್ನು ಸ್ಮಾರ್ಟ್‍ಸಿಟಿ ಯೋಜನೆಗೆ ಆಯ್ಕೆ ಮಾಡಲಾಗಿದೆ' ಎಂದು ಅವರು ತಿಳಿಸಿದರು.

ತಾರತಮ್ಯಕ್ಕೆ ಆಸ್ಪದವಿಲ್ಲ: ‘ಹುಬ್ಬಳ್ಳಿಯಲ್ಲಿ ಹುಟ್ಟಿ ಬೆಳೆದಿರುವ ತಮಗೆ ಇಲ್ಲಿನ ಎಲ್ಲ್ಲ ಪ್ರದೇಶಗಳ ಬಹುತೇಕ ಸಮಸ್ಯೆಗಳು ತಿಳಿದಿವೆ. ಮುಖ್ಯ ಕಾಲುವೆಯ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು. ಜಿಲ್ಲೆಯ ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯಕ್ಕೆ ಆಸ್ಪದವಿಲ್ಲ. 300 ಕೋಟಿ ರೂ.ವೆಚ್ಚದಲ್ಲಿ ಜಯದೇವ ಹೃದ್ರೋಗ ಕೇಂದ್ರ ಸ್ಥಾಪನೆಗೆ ಆಗಸ್ಟ್ ತಿಂಗಳಲ್ಲಿ ಅಡಿಗಲ್ಲು ಸಮಾರಂಭ ಹಮ್ಮಿಕೊಳ್ಳಲಾಗುವುದು' ಎಂದು ತಿಳಿಸಿದರು.

‘ಎಫ್‍ಎಂಸಿಜಿ ಕ್ಲಸ್ಟರ್ ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಜನೆಯ ಬಜೆಟ್ ಘೋಷಣೆಯ ಅನುಷ್ಟಾನಕ್ಕೆ ಆದೇಶ ಹೊರಡಿಸಲಾಗಿದೆ.ತುಮಕೂರು ಮತ್ತು ಧಾರವಾಡದಲ್ಲಿ ವಿಶೇಷ ಬಂಡವಾಳ ಕಾರ್ಯಕ್ರಮಗಳ ಮೂಲಕ ಉದ್ದಿಮೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುವುದು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಮತ್ತು ಆ ಮೂಲಕ ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಯು ಅರಣ್ಯ ಹಾಗೂ ಪರಿಸರ ಮಂತ್ರಾಲಯದ ಕ್ಲಿಯರೆನ್ಸ್ ಪಡೆಯುವ ಹಂತದಲ್ಲಿದೆ ಶೀಘ್ರ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ' ಎಂದು ಅವರು ವಿವರಿಸಿದರು.

‘ತುಮಕೂರು-ದಾವಣಗೆರೆ ಹಾಗೂ ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಅನುಮೋದನೆ ದೊರೆತಿದ್ದು, ಯೋಜನೆಯನ್ನು ಇದೇ ವರ್ಷ ಪ್ರಾರಂಭಿಸುವ ಗುರಿ ಇದೆ. ಹುಬ್ಬಳ್ಳಿ ಧಾರವಾಡದ ಸಮಗ್ರ ಅಭಿವೃದ್ಧಿಗೊಳಿಸುವ ಮೂಲಕ ಉತ್ತರ ಕರ್ನಾಟಕದ ವಾಣಿಜ್ಯ ಅಭಿವೃದ್ಧಿಗೆ ಇಂಬು ನೀಡಲಾಗುವುದು. ಹಳೆ ಹುಬ್ಬಳ್ಳಿ ರೈತರ ಬೇಡಿಕೆಯಂತೆ ಪಶು ವೈದ್ಯಕೀಯ ಪಾಲಿಕ್ಲಿನಿಕ್ ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News