ಬೆಳಗಾವಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5ಲಕ್ಷ ರೂ.ಪರಿಹಾರ ಘೋಷಣೆ

Update: 2022-06-26 16:08 GMT

ಬೆಳಗಾವಿ, ಜೂ. 26: ‘ಬೆಳಗಾವಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5ಲಕ್ಷ ರೂಪಾಯಿಗಳ ಪರಿಹಾರ ನೀಡಲು ತೀರ್ಮಾನಿಸಲಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿರುವುದು ಅತ್ಯಂತ ದುಃಖಕರ ಸಂಗತಿ. ಅಪಘಾತದಲ್ಲಿ 7ಜನ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆಯ ವ್ಯವಸ್ಥೆ ಪೂರೈಸಲು ಈಗಾಗಲೇ ಸೂಚನೆ ನೀಡಲಾಗಿದೆ' ಎಂದು ಹೇಳಿದರು.

‘ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 5ಲಕ್ಷ ರೂ.ಗಳ ಪರಿಹಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ತಲಾ 2ಲಕ್ಷ ರೂ. ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ. ಗಾಯಗೊಂಡವರಿಗೆ ಸರಕಾರದ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿ 5ಲಕ್ಷ ರೂ.ಪರಿಹಾರ: ‘ಅಪಘಾತಕ್ಕೆ ಒಳಗಾದವರಲ್ಲಿ 5ಜನ ಕಾರ್ಮಿಕರಿದ್ದು, ಅವರಿಗೆ ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿಯಾಗಿ 5ಲಕ್ಷ ರೂ.ಗಳ ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ: ‘ಬೆಳಗಾವಿಯ ಮೂಡಲಗಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭ್ರೂಣ ಹತ್ಯೆ ಗಂಭೀರವಾದ ವಿಷಯವಾಗಿದೆ. ಕೃತ್ಯ ನಡೆದಿರುವ ಆಸ್ಪತ್ರೆಯ ಮಾಹಿತಿ ಈಗಾಗಲೇ ದೊರೆತಿದೆ. ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಮೇಲೆ ಕ್ರಮ ತೆಗೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ಮಾಡಲು ಆದೇಶ ನೀಡಲಾಗಿದೆ. ಈ ಪ್ರಕರಣದಲ್ಲಿ ಶಾಮೀಲಾಗಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು'

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News