ಚಿಪ್ಪು ಹಂದಿಯ ಚಿಪ್ಪುಗಳ ಮಾರಾಟ ಯತ್ನ: ಆರೋಪಿಗಳಿಬ್ಬರ ಬಂಧನ

Update: 2022-06-28 15:04 GMT

ಮಡಿಕೇರಿ ಜೂ.28 : ಚಿಪ್ಪು ಹಂದಿಯ ಚಿಪ್ಪುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಮನೋಜ್ ಬಿ. ಹಾಗೂ ಮುಹಮ್ಮದ್ ಇಮ್ತಿಯಾಝ್ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. 

ಮಡಿಕೇರಿ ಮಂಗಳೂರು ರಸ್ತೆಯ ತಾಳತ್ತಮನೆ ಜಂಕ್ಷನ್ ಬಳಿ ಬಸ್ ನಿಲ್ದಾಣದಲ್ಲಿ ಇಬ್ಬರು ವ್ಯಕ್ತಿಗಳು ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಜೂ.28ರಂದು ಮಡಿಕೇರಿ ತಾಲೂಕು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳಕ್ಕೆ ಖಚಿತ ಮಾಹಿತಿ ಲಭಿಸಿತ್ತು. ಈ ಸಂದರ್ಭ ಸಿಬ್ಬಂದಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸಿದ್ದಾರೆ. ಆರೋಪಿಗಳ ವಶದಲ್ಲಿದ್ದ 17 ಕೆ.ಜಿ. 500 ಗ್ರಾಂ ಚಿಪ್ಪುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ, ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಅಧೀಕ್ಷಕ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು. ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಮತ್ತು ಮಂಜುನಾಥ್ ಅವರುಗಳು ಕಾರ್ಯಾಚರಣೆ ನಡೆಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News