ಸ್ವಚ್ಛತೆಗೆ ಆದ್ಯತೆ ನೀಡುವುದು ಎಲ್ಲರ ಕರ್ತವ್ಯ: ಸಚಿವ ಎಸ್.ಅಂಗಾರ

Update: 2022-06-28 15:54 GMT

ಉಡುಪಿ, ಜೂ.28: ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾರ್ಯನಿರ್ವಹಿಸು ತ್ತಿರುವ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡುವುದು ಮುಖ್ಯ ಕರ್ತವ್ಯವಾಗಿದೆ. ಇದರಿಂದ ಸಮಾಜದಲ್ಲಿ ಎಲ್ಲರೂ ಉತ್ತಮ ಅರೋಗ್ಯವಂತರಾಗಿ ಇರಲು ಸಾಧ್ಯ ಎಂದು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತಿದ್ದರು.

ನಮ್ಮ ಸುತ್ತಮುತ್ತಲಿನ ಪರಿಸರವನ್ನು ನಾವು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರಥಮ ಆದ್ಯತೆಯಾಗಬೇಕು. ಕೇವಲ ಪ್ರಶಸ್ತಿ ಪುರಸ್ಕಾರ ಪಡೆಯುವ ದೃಷ್ಟಿಯಿಂದ ಈ ಕಾರ್ಯವನ್ನು ಮಾಡದೇ, ಇದೊಂದು ನಮ್ಮ ದೈನಂದಿನ ಚಟುವಟಿಕೆಗಳ ಭಾಗವಾಗಬೇಕು ಎಂದರು.

ಯಾವುದೇ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವಾಗ ಫಲಾಪೇಕ್ಷೆ ಇಲ್ಲದೆ ನಮ್ಮ ಕರ್ತವ್ಯಗಳನ್ನು ಶ್ರದ್ಧೆಯಿಂದ ಮಾಡಿದಾಗ ಅದಕ್ಕೆ ಪ್ರತಿಫಲ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ಅಂತಹ ಪ್ರತಿಫಲ ಮಹತ್ವನ್ನು ಪಡೆದಿರುತ್ತದೆ. ಇದು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಾಂದಿಯಾಗುತ್ತದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಈ ಪುರಸ್ಕಾರಕ್ಕೆ ಜಿಲ್ಲೆಯ 1168 ಶಾಲಾ ಕಾಲೇಜುಗಳಲ್ಲಿ 729 ಶಾಲೆಗಳು ನೊಂದಾಯಿಸಿಕೊಂಡಿದ್ದು, 627 ಶಾಲೆಗಳು ಆನ್‌ಲೈನ್‌ನಲ್ಲಿ ತಮ್ಮ ಶಾಲೆಯ ಕಾರ್ಯ ಸಾಧನೆಗಳ ಮಾಹಿತಿಯನ್ನು ದಾಖಲಿಸಿವೆ. ಜಿಲ್ಲಾ ಮಟ್ಟದ ಸಮಿತಿಯು ಸರಕಾರದ ಮಾನದಂಡದಂತೆ 38 ಶಾಲೆಗಳನ್ನು ವಿವಿಧ ಆಯಾಮಗಳಲ್ಲಿ ಆಯ್ಕೆಮಾಡಿವೆ. ಆಯ್ಕೆಯಾದ ಎಲ್ಲಾ ಶಾಲಾ-ಕಾಲೇಜು ಗಳನ್ನು ವೈಯಕ್ತಿಕವಾಗಿ ಅಭಿನಂದಿಸುತ್ತೇನೆ ಎಂದು ಅಂಗಾರ ನುಡಿದರು.

ಪ್ರಶಸ್ತಿ ಪುರಸ್ಕೃತರು: ಸ್ವಚ್ಛ ವಿದ್ಯಾಲಯ ಪ್ರಶಸ್ತಿ ಪುರಸ್ಕಾರದಲ್ಲಿ, ಕಾರ್ಕಳ ತಾಲೂಕಿನ ನಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬ್ರಹ್ಮಾವರದ ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರ್ಸೆ, ಹಾರಾಡಿ ಜಿ.ಎಂ.ವಿದ್ಯಾನಿಕೇತನ ಶಾಲೆ, ಕುಂದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುವಳತ್ತೂರು, ಕಾರ್ವಾಡಿ ಹಿರಿಯ ಪ್ರಾಥಮಿಕ ಶಾಲೆ, ನೇತಾಜಿ ಹಿರಿಯ ಪ್ರಾಥಮಿಕ ಶಾಲೆ ಹಳ್ನಾಡು, ಉಡುಪಿಯ ಸೈಂಟ್ ಸಿಸಿಲಿಸ್ ಶಾಲೆಗಳಿಗೆ ಸಮಗ್ರ ಪ್ರಶಸ್ತಿ ಹಾಗೂ 30 ಶಾಲೆಗಳಿಗೆ ಇತರೆ ಪ್ರಶಸ್ತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗೋವಿಂದ ಮಡಿವಾಳ ಹಾಗೂ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
ಚಂದ್ರಾ ನಾಯಕ್ ಸ್ವಾಗತಿಸಿ,ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News