ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕಿದೆ: ಮಧು ಬಂಗಾರಪ್ಪ

Update: 2022-07-05 17:22 GMT

ಮಂಗಳೂರು: ರಾಜ್ಯದಲ್ಲಿ ಈಗಾಗಲೇ ೭೫ ಲಕ್ಷಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸದಸ್ಯರನ್ನಾಗಿ ನೋಂದಾಯಿಸಲಾಗಿದೆ. ಈ ಬೆಳವಣಿಗೆ ಇದೀಗ ಹೊಸ ಇತಿಹಾಸ ಸೃಷ್ಟಿಸಲಿದೆ. ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕಿದೆ ಎಂದು ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಮಧು ಬಂಗಾರಪ್ಪಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಂಗಳೂರು ನಗರ ಬ್ಲಾಕ್ ಹಾಗೂ ಮಂಗಳೂರು ದಕ್ಷಿಣ ಬ್ಲಾಕ್ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ದ.ಕ. ಜಿಲ್ಲೆಯಲ್ಲಿ ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಅವಿರತವಾಗಿ ತೊಡಗಿಸಿಕೊಂಡು, ಬೂತ್ ಮಟ್ಟದಲ್ಲಿ ನಿರಂತರವಾಗಿ ಪಕ್ಷವನ್ನು ಸಂಘಟಿಸುವ ಅಗತ್ಯವಿದೆ. ಬಿಜೆಪಿಗರಿಗೆ ಎಲ್ಲಾ ವರ್ಗದವರನ್ನು ಸಮಾನವಾಗಿ ನಡೆಸಿಕೊಳ್ಳುವ ಮನಸ್ಥಿತಿಯೇ ಇಲ್ಲ. ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದ ಜನರ ಪ್ರೀತಿ, ವಿಶ್ವಾಸ ಗಳಿಸುವಲ್ಲಿ ಸಫಲವಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಜೆ.ಆರ್. ಲೋಬೊ, ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ಸಲಿಂ ಮತ್ತು ಪ್ರಕಾಶ್ ಸಾಲ್ಯಾನ್ ಮಾತನಾಡಿದರು.  ಸದಾಶಿವ ಅಮೀನ್ ಹಾಗೂ ದುರ್ಗಾ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News