ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

Update: 2022-07-06 14:57 GMT

ಬೆಂಗಳೂರು, ಜು.6: ಲಂಚ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪುನ್ನು ಜು.11ಕ್ಕೆ ಕಾಯ್ದಿರಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ.ಮಂಜುನಾಥ್ ಅವರನ್ನು 2 ದಿನಗಳ ಹಿಂದೆ ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ನಗರದ ಸಿಸಿಎಚ್ 24ರ ಎಸಿಬಿ ವಿಶೇಷ ಕೋರ್ಟ್, ಮಂಜುನಾಥ್‍ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದರು.

ಬೆಂಗಳೂರು ನಗರ ಡಿಸಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಯಶವಂತಪುರದ ಅವರ ನಿವಾಸದಲ್ಲಿ ಬಂಧಿಸಿದ್ದರು. ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದರಿಂದ ಮಂಜುನಾಥ್ ಅವರು ಇನ್ನು 5 ದಿನ ಜೈಲಿನಲ್ಲೇ ಕಾಲಕಳೆಯಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News