ಪಿಎಸ್‍ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ

Update: 2022-07-07 18:00 GMT

ಬೆಂಗಳೂರು, ಜು.7: ಪಿಎಸ್‍ಐ ನೇಮಕಾತಿ ಹಗರಣದ ತನಿಖೆಯನ್ನು ಹೈಕೋರ್ಟ್‍ನ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ನಡೆಸಬೇಕು ಹಾಗೂ ಈ ಹಗರಣದ ಕಿಂಗ್‍ಪಿನ್‍ಗಳನ್ನು ಶೀಘ್ರವೆ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ಗುರುವಾರ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕ ಧರಣಿ ನಡೆಸಿತು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಿಎಸ್‍ಐ ನೇಮಕಾತಿ ಪ್ರಕರಣದ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅನ್ಯಾಯಕ್ಕೊಳಗಾಗಿರುವ ಯುವಕರಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ಧರಣಿ ನಡೆಸಿದ್ದೇವೆ ಎಂದರು.

545 ಪಿಎಸ್‍ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿಯಲ್ಲಿ 300ಕ್ಕೂ ಹೆಚ್ಚು ಜನರ ಬಳಿ ದುಡ್ಡು ತೆಗೆದುಕೊಂಡು, ಓಎಂಆರ್ ಶೀಟುಗಳನ್ನು ನೇಮಕಾತಿ ಸಮಿತಿಯ ಅಧ್ಯಕ್ಷರಾಗಿದ್ದ ಎಡಿಜಿಪಿ ಅಮೃತ್ ಪೌಲ್ ಅವರ ಕಚೇರಿಯಲ್ಲಿ ತಿದ್ದಲಾಗಿದೆ. ಮಂತ್ರಿಗಳು, ಸರಕಾರದ ಕುಮ್ಮಕ್ಕು ಇಲ್ಲದೆ ಇದು ಮಾಡಲು ಸಾಧ್ಯವಿಲ್ಲ. ಕಳೆದ ಮಾರ್ಚ್‍ನಲ್ಲಿ ಸದನದಲ್ಲಿ ಈ ಹಗರಣದ ಕುರಿತು ಪ್ರಸ್ತಾಪಿಸಿದಾಗ ಗೃಹ ಸಚಿವರು ಯಾವುದೆ ಭ್ರಷ್ಟಾಚಾರ, ಅವ್ಯವಹಾರ ನಡೆದಿಲ್ಲ ಎಂದಿದ್ದರು. ಭ್ರಷ್ಟಾಚಾರ ನಡೆಯದೆ ಎಡಿಜಿಪಿ ಬಂಧನವಾಗಿದೆಯೇ ಎಂದು ಅವರು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ 50ಕ್ಕೂ ಹೆಚ್ಚು ಜನರ ಬಂಧನವಾಗಿದೆ. ಇದೊಂದು ದೊಡ್ಡ ಹಗರಣ, ಭ್ರಷ್ಟಾಚಾರದ ಜಾಲ. ಇದರಲ್ಲಿ ಮಂತ್ರಿಗಳು, ರಾಜಕಾರಣಿಗಳು, ಅಧಿಕಾರಿಗಳು ಇದ್ದಾರೆ. ಎಲ್ಲರಿಗೂ ಪಾಲು ಹೋಗಿದೆ. ಮಂತ್ರಿಗಳು, ರಾಜಕಾರಣಿಗಳು, ಹಿರಿಯ ಅಧಿಕಾರಿಗಳ ಮೇಲೆ ಆಪಾದನೆ ಇರುವುದರಿಂದ ಸಿಐಡಿ ತನಿಖೆಯಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸಲು ಆಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಈ ಹಗರಣ ಬಯಲಿಗೆ ಬಂದು ಇಷ್ಟು ದಿನಗಳಾದರೂ ಅದರ ಹಿಂದಿನ ಕಿಂಗ್‍ಪಿನ್‍ಗಳ ಬಂಧನ ಆಗಿಲ್ಲ. ಅವರು ಹೊರಗೆ ಆರಾಮಾಗಿದ್ದಾರೆ. ಅಮೃತ್ ಪೌಲ್ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಸಿದ್ಧರಿಲ್ಲ. ಆದುದರಿಂದ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ ಹಿಡಿದು ಗೃಹ ಸಚಿವಾಲಯ, ಪೊಲೀಸ್ ಅಧಿಕಾರಿಗಳ ಕಚೇರಿಗಳ ಪ್ರತಿನಿಧಿಗಳು ಭಾಗಿಯಾಗಿದ್ದು, ಸರಕಾರ ಎಲ್ಲವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಹೀಗಾಗಿ ಪ್ರಕರಣದ ಎಲ್ಲ ಬಂಧಿತರಿಂದ ಸೆಕ್ಷನ್ 164 ಪ್ರಕಾರ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಬೇಕು ಎಂದು ಆಗ್ರಹಿಸಿದರು.

ಸರಕಾರ ಈ ಪ್ರಕರಣದಲ್ಲಿ ಸಚಿವರು ಹಾಗೂ ಅಧಿಕಾರಿಗಳನ್ನು ರಕ್ಷಣೆ ಮಾಡಿಕೊಳ್ಳಲು ತನಗೆ ಬೇಕಾದ ರೀತಿಯಲ್ಲಿ ಬಂಧಿತ 50 ಆರೋಪಿಗಳಿಂದ ಹೇಳಿಕೆ ದಾಖಲಿಸಿಕೊಂಡಿದೆ. ಕ್ಯಾಮೆರಾಗಳನ್ನು ಬಂದ್ ಮಾಡಿ ಅವರಿಂದ ರಹಸ್ಯವಾಗಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.  ಯಾರು ಯಾವ ಅಧಿಕಾರಿಗಳನ್ನು ಯಾವ ಕಚೇರಿಯಲ್ಲಿ, ಹೊಟೇಲ್‍ನಲ್ಲಿ ಭೇಟಿ ಮಾಡಿದ್ದಾರೆ ಎಂದು ನಮಗೆ ಗೊತ್ತಿದೆ. ಸರಕಾರ ಇದರಲ್ಲಿ ಭಾಗಿಯಾಗಿರುವ ಅಧಿಕಾರಿ ಹಾಗೂ ಸಚಿವರನ್ನು ರಕ್ಷಿಸುತ್ತಿದೆ ಎಂದು ಅವರು ದೂರಿದರು.

ಧರಣಿಯಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಬಿ.ರಮಾನಾಥ ರೈ, ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುಹಮ್ಮದ್ ಹಾರೀಸ್ ನಲಪಾಡ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

ಹೈಕೋರ್ಟ್ ನ್ಯಾಯಮೂರ್ತಿ ಸಂದೇಶ್ ಎಂಬವರು ಸರಕಾರದ ಮೇಲೆ ಛಾಟಿ ಬೀಸದೆ ಹೋಗಿದ್ದರೆ ಅಮೃತ್ ಪೌಲ್ ಬಂಧನವು ಆಗುತ್ತಿರಲಿಲ್ಲ. ಈ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಚಿವ ಅಶ್ವತ್ಥ ನಾರಾಯಣ ಮುಚ್ಚಿಹಾಕಲು ಹೊರಟ್ಟಿದ್ದರು.
-ಸಿದ್ದರಾಮಯ್ಯ, ವಿಪಕ್ಷ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News