ಜಮ್ಮು ಕಾಶ್ಮೀರ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ; ಸಿಬಿಐ ತನಿಖೆಗೆ ಆದೇಶ

Update: 2022-07-08 17:05 GMT

ಶ್ರೀನಗರ, ಜು. 8: ಜಮ್ಮು ಹಾಗೂ ಕಾಶ್ಮೀರದ ಪಿಎಸ್‌ಐ ಪರೀಕ್ಷೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ರದ್ದುಗೊಳಿಸಲಾಗಿದೆ ಹಾಗೂ ಸಿಬಿಐ ತನಿಖೆಗೆ ಆದೇಶಿಸಲಾಗಿದೆ. 

ಜಮ್ಮು ಹಾಗೂ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಗೊಳಿಸಿದ ಬಳಿಕ ನಡೆಯುತ್ತಿರುವ ಮೊದಲ ಪ್ರಮುಖ ನೇಮಕಾತಿ ಪ್ರಕ್ರಿಯೆ ಇದಾಗಿದೆ. ಈ ಅಕ್ರಮದ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಿಬಿಐಗೆ ಆದೇಶಿಸಿದ್ದಾರೆ. ಜಮ್ಮು ಹಾಗೂ ಕಾಶ್ಮೀರದ ಹೆಚ್ಚುವರಿ ಮುಖ್ಯ ಗೃಹ ಕಾರ್ಯದರ್ಶಿ ಆರ್.ಕೆ. ಗೋಯಲ್ ಅವರ ನೇತೃತ್ವದ ತನಿಖಾ ಸಮಿತಿ ವರದಿ ಸಲ್ಲಿಸಿದ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಜಮ್ಮು ಹಾಗೂ ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (ಜೆಕೆಎಸ್‌ಎಸ್‌ಬಿ) ಕಳೆದ ತಿಂಗಳು ಬಿಡುಗಡೆ ಮಾಡಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ)ಹುದ್ದೆಯ ಮೆರಿಟ್ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವುದನ್ನು ಸಮಿತಿ ಪತ್ತೆ ಮಾಡಿದೆ. 

‘‘ಜೆಕೆಪಿ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ. ಆಯ್ಕೆ ಪ್ರಕ್ರಿಯೆ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲಿ ನ್ಯಾಯದ ಮುಂದೆ ತರಲಾಗುವುದು. ಇದು ನಮ್ಮ ಯುವಜನತೆಯ ಭವಿಷ್ಯವನ್ನು ರಕ್ಷಿಸುವ ದಿಶೆಯಲ್ಲಿ ಮೊದಲ ಹೆಜ್ಜೆ. ಹೊಸ ನೇಮಕಾತಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರಕಾರ ಶೀಘ್ರದಲ್ಲಿ ನಿರ್ಧರಿಸಲಿದೆ’’ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಟ್ವೀಟ್ ಮಾಡಿದ್ದಾರೆ. 

ಮಾರ್ಚ್ 27ರಂದು 1200 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆದಿತ್ತು. 1 ಲಕ್ಷಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದರು. 97,000 ಅರ್ಹ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಜೂನ್ 4ರಂದು ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿತ್ತು. ಬಳಿಕ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದ ಬಗ್ಗೆ ದೂರುಗಳು ಕೇಳಿ ಬಂದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News