PSI ಅಕ್ರಮ ಪ್ರಕರಣ; ತನಿಖಾಧಿಕಾರಿಗಳು ಸರಕಾರದ ಒತ್ತಡಕ್ಕೆ ಮಣಿಯುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಆರೋಪ

Update: 2022-07-11 14:50 GMT

ಬೆಂಗಳೂರು, ಜು. 11: ‘ಪೊಲೀಸ್ ಸಬ್ ಇನ್‍ಸ್ಪೆಕ್ಟರ್(ಪಿಎಸ್ಸೈ) ಅಕ್ರಮ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಸರಕಾರದ ಒತ್ತಡಕ್ಕೆ ಮಣಿದು, ಪ್ರಬಲ ಅಧಿಕಾರಿ ಹಾಗೂ ರಾಜಕಾರಣಿಗಳಿಗೆ ಬೆಂಬಲವಾಗಿ ನಿಂತಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ‘ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರೂ ಭಾಗಿಯಾಗಿದ್ದಾರೆ' ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಪಿಎಸ್ಸೈ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ತನಿಖಾಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಅವರ ಹೇಳಿಕೆ ದಾಖಲಿಸಿಕೊಳ್ಳಬೇಕು' ಎಂದು ಆಗ್ರಹಿಸಿದರು.

‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳೂ ಆಗಿದ್ದು, ತಮಗೆ ಬಂದಿರುವ ಮಾಹಿತಿ ಆಧಾರದ ಮೇಲೆ ಈ ಪ್ರಕರಣದಲ್ಲಿ ಸಚಿವರುಗಳು ಭಾಗಿಯಾಗಿದ್ದಾರೆಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ನೆಪ ಮಾತ್ರಕ್ಕೆ ಕೆಲವರನ್ನು ಬಂಧಿಸಿದರೆ ಸಾಲುವುದಿಲ್ಲ. ಎಲ್ಲ ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಸೆಕ್ಷನ್ 164 ಪ್ರಕಾರ ಹೇಳಿಕೆ ದಾಖಲಿಸಿಕೊಳ್ಳಬೇಕು. ಆಗ ಈ ರಾಜ್ಯಕ್ಕೆ ನ್ಯಾಯ ಸಿಗಲಿದೆ. ಇದರ ಜತೆಗೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು' ಎಂದು ಅವರು ಒತ್ತಾಯ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News