ಚುನಾವಣೆ ವೇಳೆ ಹಣ ಹಂಚಿಕೆ ಆರೋಪ: ಸಂಸದ ಶ್ರೀನಿವಾಸ್ ಪ್ರಸಾದ್ ವಿರುದ್ಧದ ಸಮನ್ಸ್ ಗೆ ತಡೆ ನೀಡಿದ ಹೈಕೋರ್ಟ್

Update: 2022-07-12 13:40 GMT

ಬೆಂಗಳೂರು, ಜು.12: ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರು ಮತದಾರರೊಬ್ಬರಿಗೆ ಹಣವನ್ನು ಬಹಿರಂಗವಾಗಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ನ್ಯಾಯಾಲಯ ನೀಡಿದ್ದ ಸಮನ್ಸ್‍ಗೆ ಹೈಕೋರ್ಟ್ ತಡೆ ನೀಡಿದೆ.

ವಿಶೇಷ ಕೋರ್ಟ್ ನೀಡಿದ್ದ ಸಮನ್ಸ್ ರದ್ದು ಕೋರಿ ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಸಮನ್ಸ್ ಗೆ ತಡೆ ನೀಡಿ ಆದೇಶಿಸಿದೆ. 

ಅರ್ಜಿದಾರರ ಪರ ವಾದಿಸಿದ ವಕೀಲರು, ಸಂಸದ ಶ್ರೀನಿವಾಸ್ ಪ್ರಸಾದ್ ಅವರ ವಿರುದ್ಧ ಐಪಿಸಿ ಸೆಕ್ಷನ್ 171ಎಚ್ ಉಲ್ಲಂಘನೆ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಗೆ ತಡೆ ನೀಡಿ ಆದೇಶಿಸಿತು. 

ಪ್ರಕರಣವೇನು?: ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರು 2017ರ ಮಾ.23ರಂದು ದೇವರಸನಹಳ್ಳಿ ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡಿದ್ದರು. ಈ ವೇಳೆಯಲ್ಲಿ ವೃದ್ಧೆಯೊಬ್ಬರಿಗೆ 100 ರೂ.ಹಣವನ್ನು ನೀಡಿದ್ದರು. ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ವಲಯದ ಅಧಿಕಾರಿ ಜಯಶಂಕರ್ ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ವರ್ಗಾವಣೆಗೊಂಡಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News