×
Ad

ಕುಟುಂಬ ಯೋಜನಾ ಕ್ರಮಗಳಿಂದ ಜನಸಂಖ್ಯೆ ನಿಯಂತ್ರಣ: ಸುಮಿತ್ರಾ ನಾಯಕ್

Update: 2022-07-12 20:13 IST

ಉಡುಪಿ: ಹೆಚ್ಚುತ್ತಿರುವ ಜನಸಂಖ್ಯೆಯಿಂದ ದೇಶದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ವಸತಿ ಸಮಸ್ಯೆಗಳು ಉಂಟಾಗುತ್ತಿದ್ದು, ಆರೋಗ್ಯ ಇಲಾಖೆಯ ಕುಟುಂಬ ಯೋಜನಾ ಕ್ರಮಗಳನ್ನು ಬಳಸಿಕೊಂಡು ಸಾರ್ವಜನಿಕರು ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಹೇಳಿದ್ದಾರೆ.

ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮ್‌ರಾವ್ ಮಾತನಾಡಿ, ಭಾರತ ಅಭಿವೃದ್ಧಿಶೀಲ ರಾಷ್ಟ್ರವಾಗಿದ್ದು, ಶಿಕ್ಷಣದ ಕೊರತೆ, ಅಜ್ಞಾನ, ಬಾಲ್ಯವಿವಾಹ, ಮೂಢನಂಬಿಕೆ ಮುಂತಾದ ಕಾರಣಗಳಿಂದ ಜನಸಂಖ್ಯೆ ಹೆಚ್ಚುತ್ತಿದೆ. ಸುರಕ್ಷಿತ ಗರ್ಭಪಾತ, ಅರ್ಹ ದಂಪತಿಗಳು ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸುವ ಮೂಲಕ ಜನಸಂಖ್ಯಾ ಸ್ಪೋಟವನ್ನು ನಿಯಂತ್ರಿಸ ಬಹುದಾಗಿದೆ ಎಂದರು.

ಶಾಲಾ ಪ್ರಾಂಶುಪಾಲ ರುದ್ರೇಗೌಡ ಭಿತ್ತಿಪತ್ರ ಬಿಡುಗಡೆ ಮಾಡಿ, ಜನಸಂಖ್ಯಾ ದಿನಾಚರಣೆ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿ ಗಳಿಗೆ ಬಹುಮಾನ ವಿತರಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾತ್ವಿಕ್, ಹಿರಿಯ ಉಪನ್ಯಾಸಕ ದಯಾನಂದ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕ ವಾಗಿ ಮಾತನಾಡಿ, ಸ್ವಾಗತಿಸಿದರು. ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವಪಟ್ಟ ಪಟಗಾರ್ ಕಾರ್ಯಕ್ರಮ ನಿರೂಪಿಸಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News