ಚಿಕ್ಕಮಗಳೂರು ನೂತನ ಉಸ್ತುವಾರಿ ಸಚಿವರಾಗಿ ಭೈರತಿ ಬಸವರಾಜ್ ನೇಮಕ

Update: 2022-07-16 12:11 GMT

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಅನೇಕ ತಿಂಗಳುಗಳಿಂದ ನೆನೆಗುದಿಗೆ ಬಿದ್ದಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಪ್ರಕ್ರಿಯೆಗೆ ಕಡೆಗೂ ರಾಜ್ಯ ಸರಕಾರ ಅಸ್ತು ಎಂದಿದ್ದು, ಜಿಲ್ಲೆಯ ನೂತನ ಉಸ್ತುವಾರಿ ಸಚಿವರನ್ನಾಗಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರನ್ನು ನೇಮಿಸಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಹಾಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕಾಫಿನಾಡಿಗೆ ಖಾಯಂ ಉಸ್ತುವಾರಿ ಸಚಿವರ ನೇಮಕಕ್ಕೆ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿತ್ತು. ಮಾಜಿ ಸಿಎಂ ಯಡಿಯೂರಪ್ಪ ಅವಧಿಯಲ್ಲಿ ಸಚಿವ ಅರವಿಂದ ಲಿಂಬಾವಳಿ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದರು. ಬಳಿಕ ಸಚಿವ ಅಂಗಾರ ಅವರನ್ನು ಸರಕಾರ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದು, ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ಉಸ್ತುವಾರಿ ಸಚಿವ ಸ್ಥಾನ ಮತ್ತೆ ತೆರವಾಗಿತ್ತು. ವರ್ಷ ಕಳೆದರೂ ಚಿಕ್ಕಮಗಳೂರು ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಆಗಿರಲಿಲ್ಲ. 

ನಂತರ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಸಿಎಂ ಆದ ಬಳಿಕ ಗ್ರಾಮೀಣಾಭಿವೃದ್ಧಿ ಕೆ.ಎಸ್.ಈಶ್ವರಪ್ಪ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದರು. ಈಶ್ವರಪ್ಪ ಅವರು ಉಸ್ತುವಾರಿ ಸಚಿವರಾಗಿ ನಗರದಲ್ಲಿ ಒಂದೆರೆಡು ಸಭೆಗಳನ್ನು ನಡೆಸಿದ್ದರು. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಸ್ಥಾನ ಮತ್ತೆ ತೆರವಾಗಿತ್ತು. 

ರಾಜ್ಯ ಸರಕಾರ ಶುಕ್ರವಾರ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶಿಸಿದ್ದು, ಸದ್ಯ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭಾರೀ ಪ್ರಾಕೃತಿಕ ವಿಕೋಪಗಳ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ನೂತನ ಉಸ್ತುವಾರಿ ಸಚಿವರ ನೇಮಕದಿಂದಾಗಿ ಕಾಫಿನಾಡಿನ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಶುಕ್ರವಾರ ಜಿಲ್ಲಾ ಪ್ರವಾಸಕೈಗೊಂಡಿದ್ದ ಅವರು ಮಲೆನಾಡು ಭಾಗದಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿದ ಪ್ರದೇಶಗಳಲ್ಲಿ ಜಿಲ್ಲಾಡಳಿತದೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಜಿಲ್ಲಾ ಪ್ರವಾಸದಲ್ಲಿದ್ದ ಸಂದರ್ಭದಲ್ಲೇ ರಾಜ್ಯ ಸರಕಾರ ಭೈರತಿ ಬಸವರಾಜ್ ಅವರನ್ನು ಕಾಫಿನಾಡಿನ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News