ಮಂಕಿಪಾಕ್ಸ್ ಪ್ರಕರಣ ಹಿನ್ನೆಲೆ: ವೆನ್ಲಾಕ್‌ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್

Update: 2022-07-18 15:10 GMT
ಸಾಂದರ್ಭಿಕ ಚಿತ್ರ (PTI)

ಮಂಗಳೂರು, ಜು.18: ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ತೆರಳಿದ್ದ ಕೇರಳದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ ಎಂದು ವೆನ್ಲಾಕ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕೇರಳದ ಕಣ್ಣೂರು ಜಿಲ್ಲೆಯ ಯುವಕ ವಿದೇಶದಿಂದ ಶನಿವಾರ ಮಂಗಳೂರಿಗೆ ಆಗಮಿಸಿದ್ದ. ಬಳಿಕ ತವರೂರಿಗೆ ತೆರಳಿದ್ದ. ಈ ಯುವಕನಲ್ಲಿ ಮಂಕಿಪಾಕ್ಸ್ ಲಕ್ಷಣ ಕಂಡು ಬಂದದ್ದರಿಂದ ಕಣ್ಣೂರಿನ ಪರಿಯಾರಳ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ದ.ಕ.ಜಿಲ್ಲಾಡಳಿತವು ಜಿಲ್ಲೆಯಲ್ಲಿ ವಿಶೇಷ ನಿಗಾ ವಹಿಸಿದೆ. ಅದಕ್ಕಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ಒಂದು ವಾರ್ಡ್ ಸಿದ್ಧಪಡಿಸಲಾಗಿದೆ.

ಸದ್ಯ ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರನ್ನೂ ಕೂಡ ತಪಾಸಣೆಗೊಳಪಡಿಸಲಾಗುತ್ತಿದೆ. ಪ್ರಯಾಣಿಕರಲ್ಲಿ ಜ್ವರದ ಲಕ್ಷಣ ಕಂಡು ಬಂದರೆ ವಿಶೇಷ ನಿಗಾ ವಹಿಸಲಾಗುತ್ತದೆ. ಅಲ್ಲದೆ ಶಂಕಿತ ಪ್ರಕರಣಗಳಿಂದ ಮಾದರಿ ಸಂಗ್ರಹಿಸಿ ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಅಥವಾ ಬೆಂಗಳೂರಿನ ಎನ್‌ಐವಿಗೆ ಕಳುಹಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಗದೀಶ್ ‘ಈವರಗೆ ದ.ಕ.ಜಿಲ್ಲೆಯಲ್ಲಿ ಯಾರಲ್ಲೂ ಮಂಕಿಪಾಕ್ಸ್‌ನ ಯಾವುದೇ ಲಕ್ಷಣ ಕಂಡು ಬಂದಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಸಾಮಾನ್ಯವಾಗಿ ಜ್ವರ, ಗಂಟುನೋವು, ಶೀತ ಮಂಕಿಪಾಕ್ಸ್‌ನ ಲಕ್ಷಣಗಳಾಗಿವೆ. ಆದರೆ ಇದು ಕೋವಿಡ್-19 ಸೋಂಕಿನಂತೆ ವೇಗವಾಗಿ ಹರಡುವ ರೋಗವಲ್ಲ’ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ಕಟ್ಟೆಚ್ಚರ
ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕೇರಳದ ವ್ಯಕ್ತಿಯಲ್ಲಿ ಮಂಕಿಫಾಕ್ಸ್ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ವಾರ್ಡ್ ಒಂದನ್ನು ಇದಕ್ಕಾಗಿ ಮೀಸಲಿರಿಸಲಾಗಿದೆ. ವಿದೇಶಗಳಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲಾಗುವುದು. ಯಾರಲ್ಲಾದರೂ ಜ್ವರದ ಲಕ್ಷಣ ಕಂಡು ಬಂದರೆ ವಿಶೇಷ ನಿಗಾ ವಹಿಸಲಾಗುವುದು ಎಂದವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News