×
Ad

'ಭಿಕ್ಷಾಟನೆ ನಿಷೇಧ ಕಾಯ್ದೆ' ಕಟ್ಟುನಿಟ್ಟಾಗಿ ಜಾರಿಗೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2022-07-18 18:57 IST

ಬೆಂಗಳೂರು, ಜು.18: ‘ಚಿಕ್ಕ ಮಕ್ಕಳು, ಮಹಿಳೆಯರನ್ನು ಬಳಸಿಕೊಂಡು ಮಾಡುವ ಭಿಕ್ಷಾಟನೆಯೂ ಸೇರಿದಂತೆ ರಾಜ್ಯದಲ್ಲಿ ಎಲ್ಲ ರೂಪದ ಭಿಕ್ಷಾಟನೆಯನ್ನು ನಿಯಂತ್ರಣ ಮಾಡಲಾಗುವುದು. ಅಲ್ಲದೆ, ‘ಭಿಕ್ಷಾಟನೆ ನಿಷೇಧ ಕಾಯ್ದೆ' ಸಂಪೂರ್ಣ ಜಾರಿಗೆ ಕ್ರಮ ಕೈಗೊಳ್ಳಲಾಗುವುದು' ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ‘ಭಿಕ್ಷಾಟನೆ ನಿರ್ಮೂಲನೆ' ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಆಚಾರ್ ಹಾಲಪ್ಪ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಭಿಕ್ಷಾಟನೆ ಹೆಸರಿನಲ್ಲಿ ಕಾನೂನು ಬಾಹಿರ ಕೃತ್ಯಗಳು ನಡೆಯುವುದನ್ನು ಗುರುತಿಸಿದೆ. ವಿಶೇಷವಾಗಿ ಚಿಕ್ಕ ಮಕ್ಕಳಿಗೆ ನಿಷೇಧಿತ ‘ಮತ್ತು' ಬರುವ ಔಷಧ ನೀಡಿ ಭಿಕ್ಷಾಟನೆಗೆ ಬಳಸಿಕೊಳ್ಳುವುದು ನಿರ್ಬಂಧಿಸಲು ಕ್ರಮ ವಹಿಸಲು ಸೂಚನೆ ನೀಡಲಾಗಿದೆ' ಎಂದು ಹೇಳಿದರು.

‘ಮಕ್ಕಳನ್ನು ಅಂಗವಿಕಲರನ್ನಾಗಿ ಮಾಡಿ ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗುವುದು. ಅಲ್ಲದೆ, ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಹಾಗೂ ಗೃಹ, ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆ ಸಮನ್ವಯತೆ ಕುರಿತು ಚರ್ಚಿಸಲಾಗಿದೆ' ಎಂದು ಅವರು ಮಾಹಿತಿ ನೀಡಿದರು.

ಸ್ಥಳಗಳು ಗುರುತು: ‘ಬೆಂಗಳೂರು ನಗರದ ಪ್ರಮುಖ ವೃತ್ತಗಳು, ಜಂಕ್ಷನ್‍ಗಳು, ದೇವಸ್ಥಾನಗಳು ಸೇರಿ 50ರಿಂದ 70 ಸ್ಥಳಗಳಲ್ಲಿ ಭಿಕ್ಷಾಟನೆ ವ್ಯಾಪಕವಾಗಿರುವುದನ್ನು ಗುರುತಿಸಲಾಗಿದೆ. ಈಗಾಗಲೇ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಭಿಕ್ಷಾಟನೆಯಲ್ಲಿ ತೊಡಗಿದ್ದ 101 ಮಕ್ಕಳನ್ನು ವಶಕ್ಕೆ ಪಡೆದಿದ್ದು, ಅವರಿಗೆ ಪುನರ್ವಸತಿ ಕಲ್ಪಿಸಲಾಗಿದೆ' ಎಂದು ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

‘ಕಾನೂನು ಸೇವಾ ಪ್ರಾಧಿಕಾರದಿಂದ 720 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ವರದಿ ನೀಡಿದ್ದಾರೆ. ಈ ಎಲ್ಲ ಮಾಹಿತಿಯನ್ನಾಧರಿಸಿ ಸೂಕ್ತ ಕ್ರಮ ವಹಿಸಲಾಗುವುದು. ಬೆಂಗಳೂರು ನಗರದಲ್ಲಿ ಭಿಕ್ಷಾಟನೆ ವ್ಯಾಪಕವಾಗಿರುವುದನ್ನು ಗಮನಿಸಲಾಗಿದ್ದು, ಅದರ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದು ಅವರು ತಿಳಿಸಿದರು.

‘ಈಗಾಗಲೆ ಬೆಂಗಳೂರು ನಗರದ ಎಂಟು ವಲಯಗಳಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ, ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳೊಂದಿಗೆ ಭಿಕ್ಷಾಟನೆ ತಡೆಗಟ್ಟಲು ಕಾರ್ಯಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮಕ್ಕಳನ್ನು ಭಿಕ್ಷಾಟನೆಗಾಗಿ ಬೀದಿಗೆ ಬಿಡುವವರ ವಿರುದ್ಧವೂ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ' ಎಂದು ಅವರು ಮಾಹಿತಿ ನೀಡಿದರು.

‘ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಈಗಾಗಲೆ ‘ಈ ಗುರುತು' ಎಂಬ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿದ್ದು, ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಈ ಕುರಿತು ಜನ ಜಾಗೃತಿ ಮೂಡಿಸಲು ಸಾಕ್ಷ್ಯಚಿತ್ರ ರೂಪಿಸಲಾಗಿದೆ' ಎಂದ ಅವರು ತಿಳಿಸಿದರು.

‘ಭಿಕ್ಷಾಟನೆ ಸಂದರ್ಭದಲ್ಲಿ ವಶಕ್ಕೆ ಪಡೆದ ಮಕ್ಕಳು ಹಾಗೂ ತಾಯಿಯರಿಗೆ ಪುನರ್ವಸತಿ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತ್ಯೇಕವಾಗಿ ಕಟ್ಟಡವೊಂದನ್ನು ವ್ಯವಸ್ಥೆ ಮಾಡಲಾಗುವುದು. ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಅಗತ್ಯ ಅನುದಾನ ನೀಡಲಾಗುವುದು. ಈ ಕಾರ್ಯಕ್ಕೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಈ ವಿಚಾರದಲ್ಲಿ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಆಸ್ಥೆ ವಹಿಸಿ ಕೆಲಸ ಮಾಡಬೇಕು' ಎಂದು ಕೋಟ ಶ್ರೀನಿವಾಸ ಪೂಜಾರಿ ಸಲಹೆ ನೀಡಿದರು.

ಸಭೆಯಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಹಾಲಪ್ಪ ಆಚಾರ್, ಶಿವರಾಮ ಹೆಬ್ಬಾರ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೇಜರ್ ಮಣಿವಣ್ಣನ್, ಆಯುಕ್ತ ಡಾ.ಕೆ.ರಾಕೇಶ್ ಕುಮಾರ್, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ, ಡಿಸಿಪಿ ಶರಣಪ್ಪ, ಮಕ್ಕಳ ರಕ್ಷಣಾ ನಿರ್ದೇಶನಾಲಯ ನಿರ್ದೇಶಕಿ ಲತಾಕುಮಾರಿ, ಕೇಂದ್ರ ಪರಿಹಾರ ಸಮಿತಿ ನಿರ್ದೇಶಕಿ ಅರ್ಚನಾ ಸೇರಿ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News