ರಾಜ್ಯದಲ್ಲಿ ಮಂಕಿ ಪಾಕ್ಸ್ ಕಂಡುಬಂದಿಲ್ಲ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜು.18: ರಾಜ್ಯದಲ್ಲಿ ಮಂಕಿ ಪಾಕ್ಸ್ ಪ್ರಕರಣ ಕಂಡುಬಂದಿಲ್ಲ. ಈ ಕುರಿತು ವಿಮಾನ ನಿಲ್ದಾಣ, ಬಂದರುಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಮಾರ್ಗಸೂಚಿ ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಿಜೆಪಿ ಕಚೇರಿಯಲ್ಲಿ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಕಿ ಪಾಕ್ಸ್ ಗೆ ಬೇಕಾದ ಚಿಕಿತ್ಸೆಗೆ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ. ರಾಜ್ಯದೊಳಗೆ ಈ ಸೋಂಕು ನುಸುಳದಂತೆ ಕ್ರಮ ವಹಿಸಲಾಗಿದೆ ಎಂದರು.
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಸಮಾವೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಪ್ರಯುಕ್ತ ದೊಡ್ಡಬಳ್ಳಾಪುರದಲ್ಲಿ ಸಮಾವೇಶ ನಡೆಯಲಿದೆ. ಮೂರು-ನಾಲ್ಕು ಜಿಲ್ಲೆಗಳಿಂದ ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಸುಧಾಕರ್ ತಿಳಿಸಿದರು.
ಬಿಜೆಪಿ ಪಕ್ಷದ ಸರಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿ ಜು.28ಕ್ಕೆ ಒಂದು ವರ್ಷವಾಗಲಿದೆ. ಈ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರ ವಲಯದಲ್ಲಿ ಸಮಾವೇಶ ನಡೆಸಲು ಸ್ಥಳ ನಿಗದಿ ಮಾಡಲಾಗಿದೆ ಎಂದು ಅವರು ಹೇಳಿದರು.
ಬಿಜೆಪಿಯು ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ ನೀಡುತ್ತಿದೆ ಎಂಬುದನ್ನು ಸಾಬೀತು ಮಾಡಿದೆ. ಯುವಜನರು, ಮಹಿಳೆಯರು, ರೈತರು ಸೇರಿದಂತೆ ಪ್ರತಿ ಜನವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಎಷ್ಟೇ ಆರ್ಥಿಕ ದುಃಸ್ಥಿತಿ ಇದ್ದರೂ ಕೋವಿಡ್ ಸಾಂಕ್ರಾಮಿಕವನ್ನು ಪ್ರಧಾನಿ ನರೇಂದ್ರ ಮೋದಿ ಸರಕಾರ ಯಶಸ್ವಿಯಾಗಿ ನಿರ್ವಹಣೆ ಮಾಡಿದೆ ಎಂದು ಸುಧಾಕರ್ ತಿಳಿಸಿದರು.
ಕೋವಿಡ್‍ನಿಂದಾದ ಸಮಸ್ಯೆಗಳನ್ನು ನಿವಾರಿಸಿ ಇಡೀ ವ್ಯವಸ್ಥೆಯನ್ನು ಪುನಶ್ಚೇತನ ಮಾಡಲಾಗುತ್ತಿದೆ. ಪಕ್ಕದ ಶ್ರೀಲಂಕಾ ಲಾಕ್‍ಡೌನ್ ಬಳಿಕ ದಿವಾಳಿಯಾಗಿದೆ. ಆದರೆ ಅಮೇರಿಕ ಬಳಿಕ ಅತ್ಯಂತ ವೇಗದ ಆರ್ಥಿಕ ಪ್ರಗತಿ ಕಾಣುತ್ತಿರುವ ದೇಶಗಳಲ್ಲಿ ಭಾರತ ಒಂದಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾರಣ. ಹಾಗೆಯೇ ರಾಜ್ಯದ ಆರ್ಥಿಕ ಪ್ರಗತಿಗೆ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸಮರ್ಥ ಆಡಳಿತ ಕಾರಣ ಎಂದು ಅವರು ತಿಳಿಸಿದರು.
ಈ ಭಾಗದಲ್ಲಿ ಬಿಜೆಪಿ ಶಾಸಕರು ಅತಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಆದರೂ ಜನರ ಭಾವನೆಗೆ ಪೂರಕವಾಗಿ ಇಲ್ಲಿ ಸಮಾವೇಶ ನಡೆಸಲು ಅವಕಾಶ ದೊರೆತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ, ಹುಮ್ಮಸ್ಸಿನಲ್ಲಿ ಪಾಲ್ಗೊಂಡು ಸರಕಾರದೊಂದಿಗೆ ಹಾಗೂ ಪಕ್ಷದೊಂದಿಗೆ ನಾವಿದ್ದೇವೆ ಎಂದು ತೋರಿಸಿಕೊಡಲಿದ್ದಾರೆ. ಜನರು ಬಿಜೆಪಿ ಮೇಲೆ ಹೇಗೆ ವಿಶ್ವಾಸ ಇರಿಸಿದ್ದಾರೆ ಎಂಬುದು ಸಾಕ್ಷಿ ಸಮೇತ ಸಾಬೀತಾಗಲಿದೆ ಎಂದು ಸುಧಾಕರ್ ಹೇಳಿದರು.
-----------------------
ಜಯದೇವ ಹೃದ್ರೋಗ ಸಂಸ್ಥೆ ಹಾಗೂ ನೆಫ್ರೀ ಯುರಾಲಜಿ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಸ್ಥರಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ಕಡತವನ್ನು ಅವರಿಗೆ ಕಳುಹಿಸಿಕೊಡಲಾಗಿದೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಅವಧಿ ಮುಂದುವರಿಕೆ ಕುರಿತು ಮುಖ್ಯಮಂತ್ರಿಗಳೆ ತೀರ್ಮಾನ ಕೈಗೊಳ್ಳುತ್ತಾರೆ.
-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ