ಈಡಿಯಿಂದ ಸೋನಿಯಾ ಗಾಂಧಿ ವಿಚಾರಣೆ: ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಇಡಿ ನೆಪದಲ್ಲಿ ಕಿರುಕುಳ ನೀಡುತ್ತಿರುವ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣದ ವಿರುದ್ದ ಇಂದು ಫ್ರೀಡಂ ಪಾರ್ಕಿನಿಂದ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಪಕ್ಷದ ನಾಯಕರನ್ನು ಪೋಲೀಸರು ವಶಕ್ಕೆ ಪಡೆದು ಉಪ್ಪಾರ ಪೇಟೆ ಪೋಲೀಸ್ ಠಾಣೆಗೆ ಕರೆದೊಯ್ದರು.
ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯ ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ಶೇಷಾದ್ರಿ ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದಕ್ಕೂ ಮುನ್ನ ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ‘ಬಿಜೆಪಿಯವರು ಹೇಡಿಗಳು. ನಮ್ಮ ನಾಯಕರನ್ನು ಗುರಿ ಮಾಡುತ್ತಿದ್ದಾರೆ. ಧೀಮಂತ ಮಹಿಳೆಗೆ ಕಿರುಕುಳ ಕೊಡುತ್ತಿದ್ದಾರೆ. ಮೋದಿ, ಅಮಿತ್ ಶಾ ಅವರ ಧಮ್ಕಿಗೆ ಹೆದರುವುದಿಲ್ಲ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನು ಮುಟ್ಟಿದರೆ ಕೇಂದ್ರ ಸರ್ಕಾರ ಚೂರು ಚೂರಾಗಲಿದೆ’ ಎಂದು ಎಚ್ಚರಿಕೆ ನೀಡಿದರು.