ಲೋಕಾಯುಕ್ತಕ್ಕೆ ಅಧಿಕಾರ ನೀಡಲು ಸಂಪುಟದಲ್ಲಿ ಚರ್ಚೆ: ಸಚಿವ ಸುನಿಲ್ ಕುಮಾರ್

Update: 2022-07-21 16:05 GMT

ಬೆಂಗಳೂರು, ಜು. 21: ‘ಭ್ರಷ್ಟಾಚಾರ ನಿಯಂತ್ರಿಸುವ ದೃಷ್ಟಿಯಿಂದ ಲೋಕಾಯುಕ್ತ ಸಂಸ್ಥೆಗೆ ಮತ್ತೆ ಅಧಿಕಾರ ನೀಡುವ ಸಂಬಂಧ ನಾಳೆ(ಜು.22) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದು ಸೇರಿದಂತೆ ಇನ್ನಿತರ ವಿಚಾರಗಳು ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿವೆ ಎಂದರು. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವಿದೆ. ಎಲ್ಲ ವಿಚಾರಗಳ ಬಗ್ಗೆ ಕಾಲಕಾಲಕ್ಕೆ ಪಕ್ಷ ತೀರ್ಮಾನ ಮಾಡುತ್ತದೆ. ರಾಜ್ಯಾಧ್ಯಕ್ಷರ ಬದಲಾವಣೆ ಪಕ್ಷದ ಆಂತರಿಕ ವಿಚಾರ' ಎಂದು ಸ್ಪಷ್ಟಣೆ ನೀಡಿದರು.

‘ನಮ್ಮ ಪಕ್ಷದಲ್ಲಿ ಯಾವುದೇ ಒಂದು ಜಾತಿ, ಸಮುದಾಯ, ವ್ಯಕ್ತಿ ಮತ್ತು ಕುಟುಂಬಕ್ಕೆ ಸೀಮಿತವಾಗಿಲ್ಲ. ಬದಲಿಗೆ ಎಲ್ಲ ವರ್ಗಕ್ಕೂ ಪ್ರಾತಿನಿಧ್ಯ ಕಲ್ಪಿಸಲಾಗಿದೆ' ಎಂದ ಅವರು, ಐಎಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಈಡಿ ವಿಚಾರಣೆಗೆ ವಿರೋಧ ವ್ಯಕ್ತಪಡಿಸುವವರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಜೈಲಿಗೆ ಹೋಗಿಬಂದವರು' ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

‘ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಕಾನೂನಿನ ಬಗ್ಗೆ ಯಾವುದೇ ಗೌರವವಿಲ್ಲ. ಅವರು ದೇಶದ ಕ್ಷಮೆಯಾಚಿಸಬೇಕು. ಅವರು ಇಷ್ಟು ವರ್ಷ ದೇಶದ ಜನರಿಗೆ ಕಿರುಕುಳ ನೀಡಿದ್ದಾರೆ. ತಪ್ಪೇ ಮಾಡಿಲ್ಲ ಎಂದ ಮೇಲೆ ತನಿಖೆಗೆ ಭಯ ಪಡುವ ಅಗತ್ಯವೇನಿದೆ. ತನಿಖೆಯನ್ನು ಎದುರಿಸಲಿ' ಎಂದು ಅವರು ಸಲಹೆ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News