ಮತಾಂತರ ನಿಷೇಧ ಕಾಯ್ದೆ ವಿರುದ್ಧ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2022-07-22 15:54 GMT

ಬೆಂಗಳೂರು, ಜು.22: ರಾಜ್ಯ ಸರಕಾರ ಹೊರಡಿಸಿದ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆಗೆ(ಮತಾಂತರ ನಿಷೇಧ) ಸುಗ್ರೀವಾಜ್ಞೆ, 2022ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 

ಹೊಸದಿಲ್ಲಿ ಮೂಲದ ಇವಾನೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಮತ್ತು ಆಲ್ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರ ವಿಭಾಗೀಯ ನ್ಯಾಯಪೀಠ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ ಹಾಗೂ ನಾಲ್ಕು ವಾರಗಳಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. 

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ(ಮತಾಂತರ ನಿಷೇಧ ಕಾಯ್ದೆ) ಕಾಯ್ದೆಯು ಅಸಹಿಷ್ಣುತೆಯನ್ನು ಪ್ರದರ್ಶಿಸುತ್ತದೆ, ಇದು ಭಾರತೀಯ ಪ್ರಜಾಪ್ರಭುತ್ವವನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಜಾತ್ಯತೀತೆಯ ಮೇಲಿನ ದಾಳಿ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

ಸುಗ್ರೀವಾಜ್ಞೆಯ ಮೂಲಕ ಜಾರಿಗೆ ಬಂದಿರುವ ಮತಾಂತರ ನಿಷೇಧ ಕಾಯ್ದೆಯ  ನಿಬಂಧನೆಗಳು ವ್ಯಕ್ತಿಯ ಆಯ್ಕೆಯ ಸ್ವಾತಂತ್ರ್ಯ, ಜೀವನ ಮತ್ತು ಸ್ವಾತಂತ್ರ್ಯದ ಹಕ್ಕು ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಪ್ರತಿಬಂಧಿಸುತ್ತದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯವನ್ನು ಹತ್ತಿಕ್ಕಲು ರಾಜ್ಯಕ್ಕೆ ಅಧಿಕಾರ ನೀಡುವುದರಿಂದ ಸುಗ್ರೀವಾಜ್ಞೆಯ ನಿಬಂಧನೆಗಳು ಸಂವಿಧಾನದ 21ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ. 

ಬಲವಂತದ ಮತಾಂತರ ಮಾಡಿದರೆ ಅಂಥ ವ್ಯಕ್ತಿಗೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಕಾರಾಗೃಹ ಶಿಕ್ಷೆ ವಿಧಿಸಬಹುದಾಗಿದೆ. ಹಾಗೆಯೇ ಅಪ್ರಾಪ್ತ ಅಥವಾ ಮತಾಂತರ ನಿಷೇಧ ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಅಸ್ವಸ್ಥಚಿತ್ತ ವ್ಯಕ್ತಿ, ಮಹಿಳಾ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವ್ಯಕ್ತಿಗಳನ್ನು ಮತಾಂತರ ಮಾಡಿದರೆ ಮೂರರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ, 50 ಸಾವಿರ ರೂ.ಗಳವರೆಗೆ ದಂಡ ವಿಧಿಸಬಹುದಾಗಿದೆ. ಇದರಿಂದ, ಆರ್ಥಿಕ ದುರ್ಬಲರಿಗೆ ಹಾಗೂ ಮಹಿಳೆಯರಿಗೆ ಅನ್ಯಾಯವಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ. 

ಮತಾಂತರಗೊಳ್ಳುವ ಹಕ್ಕು ಸಂವಿಧಾನದ 25ನೆ ವಿಧಿಯಲ್ಲಿ ವ್ಯಕ್ತವಾಗಿದೆ. ಆದರೂ ಸುಗ್ರೀವಾಜ್ಞೆಯು ಈ ಹಕ್ಕಿನ ಮೇಲೆ ಪರಿಣಾಮ ಬೀರಲಿದೆ. ಅಲ್ಪಸಂಖ್ಯಾತರ ಹಕ್ಕುಗಳ ಕಾಯ್ದೆಯ ವಿಧಿ 30, 19(1)(ಜಿ) ಮತ್ತು 19(1)(ಎ) ಅನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ. ಒತ್ತಾಯದ, ಆಮಿಷ ಒಡ್ಡಿ ನಡೆಯುವ ಮತಾಂತರಗಳನ್ನು ತಡೆಯುವುದಕ್ಕಾಗಿ ರಾಜ್ಯ ಸರಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ(ಮತಾಂತರ ನಿಷೇಧ)ಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News