ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ, ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ: ಡಿ.ಕೆ ಶಿವಕುಮಾರ್ ಎಚ್ಚರಿಕೆ

Update: 2022-07-23 06:55 GMT

ಬೆಂಗಳೂರು: ‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ’ ಎಂದರು.

ಕೋಲಾರದಲ್ಲಿ ಬೇರೆ, ಬೇರೆ ಬಣಗಳ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಕೋಲಾರದಲ್ಲಿ ಯಾವುದೇ ಬಣ ಇಲ್ಲ. ಸೋನಿಯಾ ಗಾಂಧಿ ಅವರಿಗೆ ರಕ್ಷಣೆ ಸಿಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದೇವೆ. ನಾವು ಎಲ್ಲ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಲು ಸೂಚಿಸಿದ್ದು, ಅವರು ಮಾಡಿದ್ದಾರೆ’ ಎಂದು ಉತ್ತರಿಸಿದರು. 

ನಾನು ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ಸ್ಪರ್ಧೆಯ ಮಧ್ಯೆ ಹೋಗುವುದಿಲ್ಲ, ನನ್ನದೇ ಆದ ಪ್ರತ್ಯೇಕ ಗುರುತು ಇದೆ ಎಂಬ ಎಂ.ಬಿ. ಪಾಟೀಲ್ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘224 ಕ್ಷೇತ್ರಗಳಲ್ಲಿ ಗೆಲ್ಲುವ ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟರೆ ತಪ್ಪಿಲ್ಲ’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News