ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

Update: 2022-07-25 13:08 GMT

ಬೆಂಗಳೂರು, ಜು. 25: ‘ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ' ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಬಹುದಿನಗಳಿಂದಲೂ ಇದೆ. ಆಸ್ಪತ್ರೆಗಾಗಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಇದೀಗ ಆರೋಗ್ಯ ಸಚಿವ ಡಾ.ಸುಧಾಕರ್ ಅವರ ಜೊತೆ ಮಾತನಾಡಿದ್ದೇನೆ. ಅಧಿಕಾರಿಗಳು ಮತ್ತು ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ' ಎಂದು ತಿಳಿಸಿದರು.

‘ಆರೋಗ್ಯ ಸಚಿವ ಸುಧಾಕರ್ ಇದು ವಿಶೇಷ ಪ್ರಕರಣ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆಚರ್ಚಿಸಿ ಉತ್ತರ ಕನ್ನಡ ಜಿಲ್ಲೆಗೆಆಸ್ಪತ್ರೆ ಮಂಜೂರು ಮಾಡಲು ಅಗತ್ಯ ಪ್ರಯತ್ನ ಮಾಡುವುದು ಎಂದು ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ಈ ಸಂಬಂಧ ಸರಕಾರ ತೀರ್ಮಾನ ಮಾಡಲಿದೆ' ಎಂದು ಅವರು ನುಡಿದರು.

‘ಉತ್ತರ ಕನ್ನಡ ಜಿಲ್ಲೆಯಲ್ಲಿ ಆಸ್ಪತ್ರೆ ವಿಚಾರದಲ್ಲಿ ಹಲವು ವರ್ಷಗಳಿಂದ ಬಹಳಷ್ಟು ನೀರು ಹರಿದು ಹೋಗಿದೆ. ಮುಖ್ಯಮಂತ್ರಿ ಜತೆ ಚರ್ಚೆ ಮಾಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದು, ನಾವೆಲ್ಲರೂ ಒಟ್ಟಾಗಿ ಪ್ರಯತ್ನ ಮಾಡುತ್ತಿದ್ದೇವೆ. ಆಸ್ಪತ್ರೆ ಆಗುವವರೆಗೂ ನಿರಂತರ ಪ್ರಯತ್ನ ನಡೆಯಲಿದೆ' ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News