ಅಧಿಕಾರಿಗಳು ಸರಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ದತ್ತು ಪಡೆಯುವಂತೆ ಸುತ್ತೋಲೆ

Update: 2022-07-26 12:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.16: ಶಿಕ್ಷಣ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ರಾಜ್ಯ ಮಟ್ಟದಿಂದ ತಾಲೂಕು ಮಟ್ಟದವರೆಗಿನ ಎಲ್ಲಾ ಹಂತದ ಅಧಿಕಾರಿಗಳಿಗೆ ಸರಕಾರಿ ಶಾಲೆಗಳನ್ನು ದತ್ತು ನೀಡುವ ‘ಶೈಕ್ಷಣಿಕ ದತ್ತು ಕಾರ್ಯಕ್ರಮ’ವನ್ನು ರೂಪಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯನ್ನು ಒಳಗೊಂಡಂತೆ ಸರಕಾರದ ಎಲ್ಲಾ ಇಲಾಖೆಗಳ ರಾಜ್ಯ, ಜಿಲ್ಲಾ ಮತ್ತು ತಾಲೂಕು ಹಂತದ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಗೆ ಸೇರಿದ ಒಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುನ್ನು ದತ್ತು ಪಡೆಯಬಹುದು. ಅಧಿಕಾರಿಗಳು ತಾವು ದತ್ತು ಪಡೆದ ಶಾಲೆ ಅಥವಾ ಕಾಲೇಜಿಗೆ ಕನಿಷ್ಠ ಒಂದು ಅಥವಾ ಎರಡು ಬಾರಿ ಭೇಟಿ ನೀಡುವುದು. ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ, ಸಲಹೆ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ. 

ಅಧಿಕಾರಿಗಳ ಶಾಲಾ ಭೇಟಿಯು ಸೌಹಾರ್ದಯುತ ಮತ್ತು ಪ್ರೇರಣಾದಾಯಕವಾಗಿ ಇರಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಹಂತದಲ್ಲಿ ಶೈಕ್ಷಣಿಕ ದತ್ತು ಯೋಜನೆಗೆ ಶಾಲೆಗಳ ಹಂಚಿಕೆಯ ಜವಾಬ್ದಾರಿ ಹೊಂದಿರುವ ನೋಡಲ್ ಅಧಿಕಾರಿ ಆಗಿರುತ್ತಾರೆ. ಈ ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಶಾಲೆಗಳ ಹಂಚಿಕೆ, ಅನುಪಾಲನೆ ಮುಂತಾದ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. 

ಶಿಕ್ಷಣ ಇಲಾಖೆಯ ಉಪನಿರ್ದೇಶಕರು ದತ್ತು ನೀಡುವಲ್ಲಿ ಹೆಚ್ಚು ದಾಖಲಾತಿ ಹೊಂದಿರುವ ಮತ್ತು ಗ್ರಾಮಾಂತರ ಪ್ರದೇಶದ ಶಾಲೆಗಳಿಗೆ ಆದ್ಯತೆ ನೀಡುವುದು. ಶಾಲೆಗಳು ಪುನರಾರ್ವತನೆ ಆಗದಂತೆ ಗಮನಿಸಬೇಕು ಎಂದು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News