ಒಂದು ಸಮುದಾಯದಿಂದ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ: ಸಚಿವ ಡಾ.ಕೆ.ಸುಧಾಕರ್

Update: 2022-07-26 13:26 GMT

ಬೆಂಗಳೂರು, ಜು.26: ಯಾವುದೇ ಒಂದು ನಿರ್ದಿಷ್ಟ ಸಮುದಾಯದಿಂದ ಒಬ್ಬರು ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಸಮುದಾಯದ ಒಟ್ಟಾರೆ ಅಭಿಪ್ರಾಯ ಇರಬೇಕು. ಅದರ ಜೊತೆಗೆ, ಉಳಿದ ಸಮುದಾಯಗಳ ವಿಶ್ವಾಸವನ್ನು ಗಳಿಸಬೇಕು. ಅಂತಹವರು ಮಾತ್ರ ಮುಖ್ಯಮಂತ್ರಿಯಾಗಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಂಗಳವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳು ಏನಾದರೂ ಮಾತನಾಡುವ ಮುನ್ನ ಯೋಚನೆ ಮಾಡಿ ಮಾತನಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೆ ಸಮುದಾಯದ ಭಾವನೆಗಳಿಗೆ ನೋವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.

ಸಚಿವರಾಗಿ ಅನುಭವ ಹೊಂದಿರುವ ಕಾಂಗ್ರೆಸ್ ಶಾಸಕ ಝಮೀರ್ ಅಹ್ಮದ್ ಅವರು ಒಕ್ಕಲಿಗ ಸಮುದಾಯಕ್ಕೆ ನೋವಾಗುವಂತೆ ಮಾತನಾಡುತ್ತಾರೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಝಮೀರ್ ಅಹ್ಮದ್ ನೀಡಿರುವ ಹೇಳಿಕೆಯಿಂದಾಗಿ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗಲಿದೆ ಎಂದು ಸುಧಾಕರ್ ಹೇಳಿದರು.

ವಿರೋಧಿಗಳಿಗೆ ಉತ್ತರ: ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಇತರೆ ಪಕ್ಷದ ನಾಯಕರಿಗೆ ಜು.28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದು 3 ವರ್ಷವಾಗಿದೆ. ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಸಾಧ್ಯವಾಗಿರಲಿಲ್ಲ. ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳ ನೆರವು ಪಡೆದಿರುವ ಲಕ್ಷಾಂತರ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News