×
Ad

ಬೆಳ್ಳಾರೆ: ತಂಡದಿಂದ ಯುವಕನ ಹತ್ಯೆ

Update: 2022-07-26 21:33 IST

ಬೆಳ್ಳಾರೆ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಘಟನೆ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ಪೂಜಾರಿ(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಎಂದು ತಿಳಿದುಬಂದಿದೆ.

ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಪ್ರವೀಣ್‌ರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿಮಧ್ಯೆ ಕೊನೆಯುಸಿರೆಳೆದರೆನ್ನಲಾಗಿದೆ. 

ಅಂಗಡಿ ಬಂದ್ ಮಾಡುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಾರೆ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬೆಳ್ಳಾರೆ ಪೇಟೆ ಸಹಿತ ಸುತ್ತಮುತ್ತ ಪೋಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News