ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ: ರೇಣುಕಾಚಾರ್ಯ

Update: 2022-07-27 14:28 GMT

ಬೆಂಗಳೂರು, ಜ.27: ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ, ಆದ್ದರಿಂದ ನಮ್ಮ ಸರಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ ‘ರಾಜೀನಾಮೆ’ ನೀಡಲು ಯೋಚಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಸರಕಾರ ಯೋಗಿ ಆದಿತ್ಯನಾಥ್ ಅವರ ಸರಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

ಪ್ರತಿ ಬಾರಿ ಹಿಂದೂ ಕಾರ್ಯಕರ್ತರ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಿಂದ ಏನೂ ಪ್ರಯೋಜನವಿಲ್ಲ. ಹಿಂದೂ ಕಾರ್ಯಕರ್ತರ ನಂಬಿಕೆ ಉಳಿಸಿಕೊಳ್ಳಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್ಕೌಂಟರ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೆಲ ದಿನಗಳ ಹಿಂದೆ ನನಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನೂ ಸಹ ನಮ್ಮ ಪೊಲೀಸ್ ಇಲಾಖೆ ಇದುವರೆಗೂ ಪತ್ತೆ ಹಚ್ಚಿಲ್ಲ ಎಂದು ಹೇಳಿಕೊಳ್ಳುವುದಕ್ಕೆ ನನಗೆ ಮುಜುಗರವಾಗುತ್ತದೆ. ಜನರಿಗೆ ಬೇಕಾಗಿರುವುದು ನಮ್ಮ ಪೌರುಷದ ಭಾಷಣ ಅಥವಾ ಹೇಳಿಕೆಗಳಲ್ಲ, ನಾವು ತೆಗೆದುಕೊಳ್ಳುವ ನಿರ್ಧಾಕ್ಷಿಣ್ಯ ಕ್ರಮಗಳು ಎಂದು ಅವರು ಹೇಳಿದ್ದಾರೆ.

ಹಿಂದೂ ಸಮೂಹ ನಮ್ಮ ಮೇಲೆ ಇಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳಲು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಾನು ಈ ಸರಕಾರದಲ್ಲಿ ಮುಂದುವರೆಯುತ್ತೇನೆ, ಇಲ್ಲವಾದರೆ ರಾಜೀನಾಮೆ ನೀಡುತ್ತೇನೆ ಎನ್ನುವುದನ್ನು ಮತ್ತೊಮ್ಮೆ ಹೇಳುತ್ತೇನೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ದಕ್ಷಿಣ ಕನ್ನಡದ ಸುಳ್ಯದ ನಮ್ಮ ಪಕ್ಷದ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ವೈಯಕ್ತಿಕವಾಗಿ 1 ಲಕ್ಷ ರೂ. ಧನಸಹಾಯವನ್ನು ನೀಡುತ್ತಿದ್ದೇನೆ. ನಾವು ಎಷ್ಟು ಕೋಟಿ ಕೊಟ್ಟರೂ ಪ್ರವೀಣ್ ಅವರ ಜೀವ ವಾಪಾಸ್ ತರಲು ಸಾಧ್ಯವಿಲ್ಲ ಎನ್ನುವುದು ಗೊತ್ತಿರುವ ವಿಚಾರ. ಆದರೆ ಪ್ರವೀಣ್ ಅವರ ಕುಟುಂಬದ ದುಃಖದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ಪ್ರವೀಣ್ ಅವರ ಬರ್ಬರ ಹತ್ಯೆ ಮಾಡಿರುವ ದುಷ್ಕರ್ಮಿಗಳನ್ನು ನಡುರಸ್ತೆಯಲ್ಲಿ ಎನ್ಕೌಂಟರ್ ಮಾಡಬೇಕು. ಹಿಂದೂ ಕಾರ್ಯಕರ್ತರ ಹತ್ಯೆಗಳು ಇಲ್ಲಿಗೆ ಕೊನೆಯಾಗಬೇಕು, ದುಷ್ಕರ್ಮಿಗಳು ಭಯ ಬೀಳುವ ರೀತಿಯಲ್ಲಿ ಕಠಿಣ ಶಿಕ್ಷೆ ನೀಡಬೇಕೆಂದು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News