ಆ.13ರಿಂದ ಸರಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ದ.ಕ.ಜಿಪಂ ಸಿಇಒ ಡಾ.ಕುಮಾರ್ ಸೂಚನೆ
ಮಂಗಳೂರು, ಆ.1: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆ.13ರಿಂದ 15ರವರೆಗೆ ಹರ್ ಘರ್ ತಿರಂಗ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳ ಕಟ್ಟಡಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜವನ್ನು ಹಾರಿಸಬೇಕು ಎಂದು ದ.ಕ.ಜಿಪಂ ಸಿಇಒ ಡಾ.ಕುಮಾರ್ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಹಾಗೂ ಸ್ವಾತಂತ್ರ್ಯೋತ್ಸವ ಆಚರಿಸುವ ಕುರಿತು ದ.ಕ.ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2002ರ ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದೆ, ಅದರಂತೆ ಆ.13ರಿಂದ 15ರವರೆಗೆ ಜಿಲ್ಲೆಯ ಪ್ರತಿಯೊಂದು ಮನೆಯ ಹಾಗೂ ಸರಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕು. ಹಗಲಿನಂತೆಯೇ ರಾತ್ರಿಯಲ್ಲೂ ಧ್ವಜ ಆರೋಹಣಕ್ಕೆ ವಿನಾಯಿತಿ ನೀಡಲಾಗಿದೆ. ಹಾಗಾಗಿ ಶಾಲೆ, ಕಾಲೇಜುಗಳು, ಗ್ರಾಪಂ ಕಾರ್ಯಾಲಯಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪ ಕೇಂದ್ರಗಳು, ಕೃಷಿ ಕೇಂದ್ರಗಳು, ಪಶು ವೈದ್ಯಕೀಯ ಆಸ್ಪತ್ರೆಗಳು ಸೇರಿದಂತೆ ಗ್ರಾಮ ಮಟ್ಟದಲ್ಲಿರುವ ಸರಕಾರದ ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಪ್ರೇಮ ಮೆರೆಯುವಂತೆ ಡಾ.ಕುಮಾರ್ ಕರೆ ನೀಡಿದರು.
ಧ್ವಜಗಳನ್ನು ಖರೀದಿಸಿ, ಗ್ರಾಮ ಮಟ್ಟದಲ್ಲಿ ಅವುಗಳನ್ನು ಉಚಿತವಾಗಿ ಸರಬರಾಜು ಮಾಡುವಂತೆ ಗ್ರಾಪಂಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ, ಅದರಂತೆ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ಧ್ವಜಗಳನ್ನು ಪಡೆದುಕೊಳ್ಳಬೇಕು ೩.೨೮ ಲಕ್ಷಕ್ಕೂ ಹೆಚ್ಚಿನ ರಾಷ್ಟ್ರ ಧ್ವಜಗಳು ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಕ್ಕೆ ಪೂರೈಸಬೇಕಾಗಿದ್ದು, ೧.೨೫ ಲಕ್ಷ ಧ್ವಜಗಳು ಕೇಂದ್ರ ಸರಕಾರದಿಂದ ನೇರವಾಗಿ ಹಂಚಿಕೆಯಾಗಿದೆ ಎಂದರು.
ಶಾಲಾ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಕುರಿತು ಜಾಗೃತಿ ಮೂಡಿಸಲು ಜಾಥಾಗಳು, ಪ್ರಬಂಧ, ಚರ್ಚಾ ಸ್ಪರ್ಧೆ, ರಂಗೋಲಿ ಸಹಿತ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಡಾ.ಕುಮಾರ್ ಸೂಚನೆ ನೀಡಿದರು.
ರಾಷ್ಟ್ರಧ್ವಜವನ್ನು ಮನೆ ಅಥವಾ ಕಟ್ಟಡದ ಮೇಲ್ಭಾಗದಲ್ಲಿ ಕಟ್ಟಬೇಕು, ಧ್ವಜ ನೀಡುವ ಸಂದರ್ಭ ಈ ಮಾಹಿತಿ ಯನ್ನು ಸಾರ್ವಜನಿಕರಿಗೆ ನೀಡಬೇಕು, ಆಗಸ್ಟ್ 15ರ ನಂತರ ರಾಷ್ಟ್ರ ಧ್ವಜವನ್ನು ಇಳಿಸಿ ಕ್ರಮವಾಗಿ ಮಡಚಿ, ಸುರಕ್ಷಿತವಾಗಿಡಬೇಕು ಎಂದು ಡಾ. ಕುಮಾರ್ ಹೇಳಿದರು.
ಆ.15ರಂದು ಸ್ವಾತಂತ್ರ್ಯದ ಅಮೃತೋತ್ಸವವನ್ನು ಜಿಲ್ಲೆಯಲ್ಲಿ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುವುದು. ಅದಕ್ಕೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದರು.
ಈ ಸಂದರ್ಭ ಭಾವೈಕ್ಯತೆ, ರಾಷ್ಟ್ರಾಭಿಮಾನ ಹಾಗೂ ಅಖಂಡತೆಯನ್ನು ಪ್ರದರ್ಶಿಸಬೇಕು. ಅದಕ್ಕಾಗಿ ಪರಿಣಾಮಕಾರಿಯಾಗಿ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲು ಅಧಿಕಾರಿಗಳ ಸಹಕಾರ ಅಗತ್ಯವಿದೆ. ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವಂತೆ ಕೃಷ್ಣಮೂರ್ತಿ ಸೂಚಿಸಿದರು.
ಅಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಲಿದ್ದಾರೆ. ಈ ಚಟುವಟಿಕೆಗಳು ಸುಸೂತ್ರವಾಗಿ ನಡೆಯುವ ದೃಷ್ಟಿಯಿಂದ ಸಂಬಂಧಿಸಿದ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಪಾಲಿಸಬೇಕು. ಅಂದು ಪೂ.11ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಸಭೆಯಲ್ಲಿ ಮಂಗಳೂರು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು.