ಚಾಣಕ್ಯ ವಿವಿಗೆ ಭೂಮಿ ಮಂಜೂರು ಪ್ರಶ್ನಿಸಿ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2022-08-02 15:41 GMT

ಬೆಂಗಳೂರು, ಆ.2: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ದೇವನಹಳ್ಳಿ ಹಿಂಭಾಗದಲ್ಲಿರುವ 116.16 ಎಕರೆ ಭೂಮಿಯನ್ನು 50.17 ಕೋಟಿ ರೂ.ಗೆ ಚಾಣಕ್ಯ ವಿಶ್ವವಿದ್ಯಾಲಯ ಎಂಬ ಖಾಸಗಿ ವಿವಿಗೆ ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮ(ಕೆಐಎಡಿಬಿ)ಕ್ಕೆ ಭೂಮಿ ಮಂಜೂರು ಮಾಡುವಂತೆ 2021ರ ಎಪ್ರಿಲ್ 28ರಂದು ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಮುಖ್ಯ ಕಾರ್ಯದರ್ಶಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

ಅರ್ಜಿದಾರರ ಪರ ವಕೀಲ ಎಸ್.ಉಮಾಪತಿ ಅವರು ವಾದಿಸಿ, ಕೆಐಎಡಿಬಿ ಅವರು ಸಾರ್ವಜನಿಕರ ಉದ್ದೇಶಕ್ಕಾಗಿ ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನೇ ರಾಜ್ಯ ಸರಕಾರವು ಚಾಣಕ್ಯ ವಿವಿಗೆ ಕೇವಲ 50.17 ಕೋಟಿ ರೂ.ಗೆ ರಿಯಾಯಿತಿ ದರದಲ್ಲಿ 116.16 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ 246 ಕೋಟಿ ನಷ್ಟವಾಗಿದೆ ಎಂದು ಪೀಠಕ್ಕೆ ತಿಳಿಸಿದರು. 

ಚಾಣಕ್ಯ ವಿವಿಗೆ ಭೂಮಿ ನೀಡುವ ವಿಧೇಯಕಕ್ಕೆ ಆತುರಾತುರವಾಗಿ ರಾಜ್ಯ ಸರಕಾರ ವಿಧಾನಸಭೆಯಲ್ಲಿ ಅನುಮೋದನೆ ನೀಡಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News