ಮಂಗಳೂರು ವಿವಿ: ಆ.10ರಿಂದ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ

Update: 2022-08-05 04:07 GMT

ಮಂಗಳೂರು, ಆ.5: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯವು 2022-23ನೇ ಸಾಲಿನ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ವಿಶ್ವವಿದ್ಯಾನಿಲಯದ ಅಧೀನಕ್ಕೆ ಒಳಪಟ್ಟ ಕಾಲೇಜು ವಿದ್ಯಾರ್ಥಿಗಳಿಗಾಗಿ ಆ.10 ರಿಂದ 25ರವರೆಗೆ ಏರ್ಪಡಿಸುತ್ತಿದೆ.

ಸಾಹಿತ್ಯ, ಲಲಿತ ಕಲೆ, ಸಂಗೀತ, ನೃತ್ಯ ಮತ್ತು ರಂಗಭೂಮಿ ಹೀಗೆ ಐದು ಪ್ರಕಾರಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಕ್ರಮವಾಗಿ ಕುಂದಾಪುರದ ಶ್ರೀ ಕಾಳವಾರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು, , ಸುರತ್ಕಲ್ ನ ಗೋವಿಂದದಾಸ ಕಾಲೇಜು, ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜು ಹಾಗೂ ಮೂಡಬಿದಿರೆಯ ಆಳ್ವಾಸ್ ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೆ ಒಳಪಟ್ಟ ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳು ಈ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಈ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗಳು ಎಐಯು ವತಿಯಿಂದ ಸಂಘಟಿಸಲ್ಪಡುವ ಮುಂದಿನ ದಕ್ಷಿಣ ವಲಯ ಯುವಜನೋತ್ಸವ ಮತ್ತು ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ ಎಂದು ವಿಶ್ವವಿದ್ಯಾನಿಲಯದ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಿ ಪ್ರೊ. ಕಿಶೋರಿ ನಾಯಕ್ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News