BBMP ವಾರ್ಡ್ ಮರುವಿಂಗಡಣೆ: ಚುನಾವಣೆ ನಡೆಸದಂತೆ ಕೋರಿ ಹೈಕೋರ್ಟ್‍ಗೆ ಅರ್ಜಿ

Update: 2022-08-08 17:31 GMT

ಬೆಂಗಳೂರು, ಆ.8: ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ (BBMP) ವಾರ್ಡ್‍ಗಳ  ರಚನೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ನಗರದ ವಕೀಲ ಎಸ್.ಇಸ್ಮಾಯಿಲ್ ಜಬಿವುಲ್ಲಾ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ನಗರಾಭಿವೃದ್ದಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ಡಿಸಿ, ಸೀಮಾ ನಿರ್ಣಯ ಆಯೋಗದ ಅಧ್ಯಕ್ಷ, ಬಿಬಿಎಂಪಿ ಆಯುಕ್ತ ಹಾಗೂ ಚುನಾವಣಾ ಆಯೋಗವನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.  

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‍ಗೆ 29 ಸಾವಿರ ಜನಸಂಖ್ಯೆ ನಿಗದಿಪಡಿಸಿ, ಈ ಮೊದಲಿದ್ದ ಏಳು ವಾರ್ಡ್‍ಗಳ ಸಂಖ್ಯೆಯನ್ನು 6ಕ್ಕೆ ಇಳಿಸಲಾಗಿದೆ. ಕೆ.ಆರ್.ಮಾರುಕಟ್ಟೆ ವಾರ್ಡ್ ಕೈಬಿಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

ಅರ್ಜಿ ವಿಚಾರಣೆ ಪೂರ್ಣಗೊಳ್ಳುವ ತನಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಅಧಿಸೂಚನೆ ಹೊರಡಿಸದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News