BBMP | ಆ.16ರವರೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಬೇಡಿ: ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದ ಹೈಕೋರ್ಟ್

Update: 2022-08-10 12:42 GMT

ಬೆಂಗಳೂರು, ಆ.10: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಾರ್ಡ್‍ಗಳನ್ನು ರಚಿಸಿ 2022ರ ಜು.14ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಿ ಹೊಸದಾಗಿ ವಾರ್ಡ್‍ಗಳನ್ನು ರಚಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಆ.16ರವರೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಬೇಡಿ ಎಂದು ಮೌಖಿಕ ಸೂಚನೆ ನೀಡಿದೆ. 

ಈ ಸಂಬಂಧ ವಕೀಲ ಎಸ್.ಇಸ್ಮಾಯಿಲ್ ಜಬೀವುಲ್ಲಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ಸಂಬಂಧ ಬುಧವಾರ ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.  

ಆರೋಪವೇನು?: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ ವಾರ್ಡ್‍ಗಳ ರಚನೆಯಲ್ಲಿ ತಾರತಮ್ಯ ಮಾಡಲಾಗಿದೆ. ಗೋವಿಂದರಾಜ ನಗರ, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‍ಗೆ ಸರಾಸರಿ 30 ಸಾವಿರ ಜನಸಂಖ್ಯೆ ನಿಗದಿಪಡಿಸಿದ್ದಲ್ಲದೇ, ವಾರ್ಡ್‍ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆದರೆ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಪ್ರತಿ ವಾರ್ಡ್‍ಗೆ ಸರಾಸರಿ 29 ಸಾವಿರ ಜನಸಂಖ್ಯೆ ನಿಗದಿಪಡಿಸಿ, ಹಿಂದೆ ಇದ್ದ ಏಳು ವಾರ್ಡ್‍ಗಳ ಸಂಖ್ಯೆಯನ್ನು 6ಕ್ಕೆ ಇಳಿಸಲಾಗಿದೆ. ಜತೆಗೆ ಕೆ.ಆರ್.ಮಾರ್ಕೆಟ್ ವಾರ್ಡ್ ಕೈಬಿಡಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವಾರ್ಡ್‍ಗಳನ್ನು ರಚಿಸಿ ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ಹೊಸದಾಗಿ ವಾರ್ಡ್‍ಗಳನ್ನು ರಚಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಐತಿಹಾಸಿಕ ಕೆ.ಆರ್. ಮಾರ್ಕೆಟ್ ವಾರ್ಡ್ ಮರು ರಚಿಸಬೇಕು. ಅರ್ಜಿ ಇತ್ಯರ್ಥಗೊಳ್ಳುವ ತನಕ ಬಿಬಿಎಂಪಿ ಚುನಾವಣೆಗೆ ಅಧಿಸೂಚನೆ ಹೊರಡಿಸದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:  BBMP ವಾರ್ಡ್ ಮೀಸಲಾತಿ; ಮುಸ್ಲಿಮರ ರಾಜಕೀಯ ಪ್ರಾತಿನಿಧ್ಯ ತಪ್ಪಿಸಲು ಸಂಚು: ಮಾಜಿ ಕಾರ್ಪೊರೇಟರ್​ಗಳ ಆಕ್ರೋಶ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News