ಎಸಿಬಿ ರದ್ದು ವಿಚಾರ; ಮೊದಲು ವಿಧಾನಸೌಧದ 3ನೇ ಮಹಡಿ ಸ್ವಚ್ಚ ಮಾಡಿ ಎಂದ ಕುಮಾರಸ್ವಾಮಿ

Update: 2022-08-11 14:34 GMT

ಬೆಂಗಳೂರು: ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ  ಹೇಳಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ‌ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು.ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು   ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಏಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ ಎಂದರು.

''ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ'':

ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಅದಕ್ಕೆ ಒಂದು ಉದಾಹರಣೆ ನೀಡುವುದಾದರೆ, ಇಂದು ರಾಮನಗರದ ಒಂದು ಹಳ್ಳಿಯ ಮಹಿಳೆಯರು ನನ್ನನ್ನು ತಡೆದರು. ಅಲ್ಲಿನ  ಮಹಿಳಾ ಹಾಲು ಉತ್ಪಾದಕರ ಸಂಘದಲ್ಲಿ 8 ಲಕ್ಷ ರೂ. ಹಣ ಲೂಟಿ ಮಾಡಿದ ಕಾರ್ಯದರ್ಶಿ ಬಗ್ಗೆ ಅವರು ದೂರು ಹೇಳಿದರು. ಹಣ ದುರುಪಯೋಗ ಮಾಡಿಕೊಂಡ ಆ ವ್ಯಕ್ತಿಯನ್ನು ಅಮಾನತುಗೊಳಿಸಲಾಗಿತ್ತು. ಆದರೆ, ಮತ್ತೆ 24 ಗಂಟೆಗಳಲ್ಲಿ ಆ ವ್ಯಕ್ತಿ ಅದೇ ಜಾಗಕ್ಕೆ ವಾಪಸ್ ಬಂದಿದ್ದಾರೆ. ಈ ರಾಜ್ಯದಲ್ಲಿ ಲೂಟಿ ಹೊಡೆಯುವವರಿಗೆ ಸಂಪೂರ್ಣ ರಕ್ಷಣೆ ನೀಡಲಾಗುತ್ತಿದೆ ಎಂಬುದು ಇದರಿಂದ ಅರ್ಥವಾಗುತ್ತದೆ ಎಂದರು.

ನಾನು ಯಾವ ದಾಖಲೆಗಳನ್ನು ಬೇಕಾದರೂ ನೀಡಬಲ್ಲೆ.  ಆದರೆ ಏನು ಪ್ರಯೋಜನ? ಎಸಿಬಿಯ ಭ್ರಷ್ಟಾಚಾರದ ಪವರ್ ಪಾಯಿಂಟ್ ಆಗಿತ್ತು. ಭ್ರಷ್ಟಾಚಾರದ ತಡೆಯುವುದು ಅದರಿಂದ ಸಾಧ್ಯ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

2008ರ ಬಿಜೆಪಿ ಸರಕಾರದಲ್ಲಿ ನಡೆದ ಅಕ್ರಮಗಳ ಬಗ್ಗೆ ದಾಖಲೆ ಬಿಡುಗಡೆ ಮಾಡಿದ ಪಕ್ಷ ಜೆಡಿಎಸ್ ಮಾತ್ರ. ‌ಅಂದಿನ ಬಿಜೆಪಿ ಸರಕಾರದ ಲಂಚಾವತಾರದ ಬಗ್ಗೆ ಸರಣಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದೆವು. ನಮ್ಮ ದೇಶದಲ್ಲಿ   ಭ್ರಷ್ಟ ವ್ಯವಸ್ಥೆ ತಡೆಯಲು ಸಂಸ್ಥೆಗಳು ಇದ್ದರೂ, ಲೂಟಿಕೋರರಿಗೆ ಯಾರು ಯಾವ ರೀತಿ ರಕ್ಷಣೆ ಕೊಟ್ಟಿದ್ದಾರೆ ಅಂತ ಗೊತ್ತಿದೆ. ನಾನು ಮತ್ತೆ  ಕೆದಕಲು ಹೋಗಲ್ಲ. ನನಗೆ ಲೋಕಾಯುಕ್ತ ಸೇರಿ ಮತ್ಯಾವ ಸಂಸ್ಥೆಗಳು ಮುಖ್ಯ ಅಲ್ಲ. ಭ್ರಷ್ಟಾಚಾರ ತೊಲಗಬೇಕು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News