BBMP ವಾರ್ಡ್ ಮರು ವಿಂಗಡಣೆಯಲ್ಲಿ ತಾರತಮ್ಯ ಆರೋಪ: ಹೈಕೋರ್ಟ್‍ನಲ್ಲಿ ಆ.11ರಂದು ಅರ್ಜಿ ವಿಚಾರಣೆ

Update: 2022-08-15 18:01 GMT

ಬೆಂಗಳೂರು, ಆ.15: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ ವಾರ್ಡ್‍ಗಳ ಪುನರ್ ರಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳು ಮಂಗಳವಾರ ಹೈಕೋರ್ಟ್‍ನಲ್ಲಿ ವಿಚಾರಣೆಗೆ ಬರಲಿವೆ. ಆ.11ರಂದು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ನ್ಯಾಯಪೀಠವು ಆ.16ರವರೆಗೆ ವಾರ್ಡ್‍ವಾರು ಮೀಸಲು ಪಟ್ಟಿ ಅಂತಿಮಗೊಳಿಸದಂತೆ ಸರಕಾರಕ್ಕೆ ನಿರ್ದೇಶನ ನೀಡಿತ್ತು.

ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ವಾರ್ಡ್‍ಗಳ ಮರು ವಿಂಗಡಣೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ವಕೀಲ ಎಸ್.ಇಸ್ಮಾಯಿಲ್ ಜಬಿವುಲ್ಲಾ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಕಳೆದ ವಿಚಾರಣೆ ವೇಳೆಯಲ್ಲಿ ನ್ಯಾ.ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ, ಸರಕಾರ, ರಾಜ್ಯ ಚುನಾವಣಾ ಆಯೋಗ ಮತ್ತು ಬಿಬಿಎಂಪಿ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ಆದೇಶಿಸಿತ್ತು.  

ಅರ್ಜಿದಾರರ ಕೋರಿಕೆ ಏನು: ಗೋವಿಂದರಾಜನಗರ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‍ಗೆ ಸರಾಸರಿ 30 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ. ವಾರ್ಡ್‍ಗಳ ಸಂಖ್ಯೆ ಸಹ ಹೆಚ್ಚಿಸಲಾಗಿದೆ. ಆದರೆ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾರ್ಡ್‍ಗೆ ಸರಾಸರಿ 39 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ. 

ಹಿಂದೆ ಏಳು ವಾರ್ಡ್‍ಗಳು ಇದ್ದವು. ಇದೀಗ ಕೆ.ಆರ್.ಮಾರ್ಕೆಟ್ ವಾರ್ಡ್ ಕೈಬಿಟ್ಟು ವಾರ್ಡ್‍ಗಳ ಸಂಖ್ಯೆಯನ್ನು ಆರಕ್ಕೆ ಇಳಿಸುವ ಮೂಲಕ ತಾರತಮ್ಯ ಮಾಡಲಾಗಿದೆ. ಹೀಗಾಗಿ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವಾರ್ಡ್‍ಗಳನ್ನು ಪುನರ್ ರಚಿಸಿ 2022ರ ಜು.14ರಂದು ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ಹೊಸದಾಗಿ ವಾರ್ಡ್‍ಗಳನ್ನು ರಚಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಐತಿಹಾಸಿಕ ಕೆ.ಆರ್.ಮಾರ್ಕೆಟ್ ವಾರ್ಡ್ ಮರು ರಚಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

ಮೂರು ಕ್ಷೇತ್ರಗಳಿಂದ ಇನ್ನಷ್ಟು ಅರ್ಜಿಗಳ ಸಲ್ಲಿಕೆ: ಪದ್ಮನಾಭನಗರ, ಶಾಂತಿನಗರ ಮತ್ತು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರಗಳ ಬಿಬಿಎಂಪಿ ವಾರ್ಡ್‍ಗಳ ಮರು ವಿಂಗಡಣೆಯನ್ನು ಪ್ರಶ್ನಿಸಿಯೂ ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಕೆಯಾಗಿವೆ. ಈ ಅರ್ಜಿಗಳೂ ಆ.16ರಂದು ವಿಚಾರಣೆಗೆ ಬರಲಿವೆ.

ವಾರ್ಡ್‍ಗಳ ಜನಸಂಖ್ಯೆ ನಿಗದಿಯಲ್ಲಿ ಏಕರೂಪತೆ ಕಾಯ್ದುಕೊಂಡಿಲ್ಲ. ಈ ಹಿಂದೆ ಕಡಿಮೆ ಜನಸಂಖ್ಯೆಯಿದ್ದ ವಾರ್ಡ್‍ಗಳಲ್ಲಿ ಸದ್ಯ ಹೆಚ್ಚಿಸಲಾಗಿದೆ. ಮತ್ತೊಂದಡೆ ಜನಸಂಖ್ಯೆ ಹೆಚ್ಚಿದ್ದ ವಾರ್ಡ್‍ಗಳಲ್ಲಿ ಜನಸಂಖ್ಯೆಯನ್ನು ತೀವ್ರ ಪ್ರಮಾಣದಲ್ಲಿ ಕಡಿತಗೊಳಿಸಲಾಗಿದೆ. ವಿಧಾನಸಭಾ ಕ್ಷೇತ್ರದ ಮತದಾರರನ್ನು ಬೇರೊಂದು ವಿಧಾನಸಭಾ ಕ್ಷೇತ್ರದಲ್ಲಿನ ವಾರ್ಡ್‍ಗಳ ಮತದಾರರಾಗಿ ಸೇರಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News