ದೇವರಾಜ ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಣೆ: ಕೋಟ ಶ್ರೀನಿವಾಸ ಪೂಜಾರಿ

Update: 2022-08-16 16:18 GMT

ಉಡುಪಿ: ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯನ್ನು ಆ.20ರಿಂದ 22ರವರೆಗೆ ಮೂರು ದಿನಗಳ ಕಾಲ ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಿ. ದೇವರಾಜ ಅರಸು ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು  ಮಾತನಾಡುತಿದ್ದರು.

ಹಿಂದುಳಿದ ವರ್ಗದವರ ಕಲ್ಯಾಣಾಭಿವೃದ್ಧಿಗೆ ದೇವರಾಜ ಅರಸು ಅವರ ಕೊಡುಗೆ ಅಪಾರ. ಅವರು ಅನುಷ್ಠಾನ ಗೊಳಿಸಿದ ಯೋಜನೆಗಳಿಂದ ಆ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದೆ. ಅವರ ಸ್ಮರಣೆ ಶಾಶ್ವತವಾದುದು ಎಂದರು.

ಆ.20ರಂದು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಅಪರಾಹ್ನ 3.30ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದೇವರಾಜ ಅರಸು ಅವರ ಕುರಿತು ಉಪನ್ಯಾಸ ಕಾರ್ಯಕ್ರಮ  ಸಹ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಹಿಂದುಳಿದ ವರ್ಗಗಳ ಸಮುದಾಯಗಳ ಕಸಬುಗಾರಿಕೆಯ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಆ.೨೧ರಂದು ಬೆಳಗ್ಗೆ ೧೦ ಗಂಟೆಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆ.೨೨ರಂದು ಬೆಳಗ್ಗೆ ೧೦ ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಕರಾಟೆ ಹಾಗೂ ಯೋಗ ಪ್ರದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಕತ್ವದಲ್ಲಿ ಜಿಲ್ಲೆಯ ಸುಪ್ರಸಿದ್ಧ ಯಕ್ಷಗಾನ ಕಲಾದರಿಂದ ಯಕ್ಷಕೂಟ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ ೨:೩೦ಕ್ಕೆ ಡಿ. ದೇವರಾಜ ಅರಸು ಜನ್ಮ ದಿನಾಚರಣೆಯ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಸಚಿವ ಕೋಟ ವಿವರಿಸಿದರು.

ಜನ್ಮ ದಿನಾಚರಣೆಯ ಅಂಗವಾಗಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಗಳನ್ನು  ಏರ್ಪಡಿಸಲಾಗಿದ್ದು, ವಿಜೇತರಿಗೆ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದ ಅವರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಸಿಇಓ ಪ್ರಸನ್ನ ಹೆಚ್., ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಸಚಿನ್ ಕುಮಾರ್, ವಾರ್ತಾಧಿಕಾರಿ ಬಿ.ಮಂಜುನಾಥ್  ಹಾಗೂ ವಿವಿಧ ಹಿಂದುಳಿದ ವರ್ಗಗಳ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News