BBMP ವಾರ್ಡ್ ಪುನರ್ ವಿಂಗಡಣೆ: ಮಧ್ಯಂತರ ಆದೇಶ ನೀಡಲು ನಿರಾಕರಿಸಿದ ಹೈಕೋರ್ಟ್

Update: 2022-08-17 15:21 GMT

ಬೆಂಗಳೂರು, ಆ.17: ಬಿಬಿಎಂಪಿ [BBMP] ವಾರ್ಡ್‍ಗಳ ಪುನರ್ ವಿಂಗಡಣೆ ಕುರಿತಂತೆ ಮಧ್ಯಂತರ ಆದೇಶ ನೀಡಲು ಹೈಕೋರ್ಟ್, ಬುಧವಾರ ನಿರಾಕರಿಸಿದೆ. 

ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ವಾರ್ಡ್‍ಗಳ ಮರು ವಿಂಗಡಣೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ವಕೀಲ ಎಸ್.ಇಸ್ಮಾಯಿಲ್ ಜಬಿವುಲ್ಲಾ ಹಾಗೂ ಇತರೆ ವಿಧಾನಸಭಾ ಕ್ಷೇತ್ರ ವಾರ್ಡ್‍ಗಳ ಪರ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ, ಈ ಆದೇಶ ಮಾಡಿದೆ.

ಪಾಲಿಕೆ ವಾರ್ಡ್‍ಗಳ ಚುನಾವಣೆಗೆ ಸಂಬಂಧಿಸಿದಂತೆ, ರಾಜ್ಯ ಸರಕಾರ ಎಲ್ಲವನ್ನೂ ತರಾತುರಿಯಾಗಿ ಆದೇಶ ಹೊರಡಿಸುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದ್ದಾರೆ. ಆದುದರಿಂದ, ಸರ್ವೋಚ್ಚ ನ್ಯಾಯಾಲಯದಿಂದಲೇ ಸ್ಪಷ್ಟತೆಯನ್ನು ಪಡೆಯುವುದು ಸೂಕ್ತ ಎಂದು ನ್ಯಾಯಪೀಠವು ಹೇಳಿದೆ. ಅರ್ಜಿ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿಕೆ ಮಾಡಿದೆ. 

ಚುನಾವಣಾ ಆಯೋಗದ ಪರ ವಾದಿಸಿದ ವಕೀಲರು, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ, ಸೆ.22ರಿಂದ ಚುನಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. 

ಅರ್ಜಿದಾರರ ಕೋರಿಕೆ ಏನು?: ಗೋವಿಂದರಾಜನಗರ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‍ಗೆ ಸರಾಸರಿ 30 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ. ವಾರ್ಡ್‍ಗಳ ಸಂಖ್ಯೆ ಸಹ ಹೆಚ್ಚಿಸಲಾಗಿದೆ. ಆದರೆ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾರ್ಡ್‍ಗೆ ಸರಾಸರಿ 39 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ. 

ಹಿಂದೆ ಏಳು ವಾರ್ಡ್‍ಗಳು ಇದ್ದವು. ಇದೀಗ ಕೆ.ಆರ್.ಮಾರ್ಕೆಟ್ ವಾರ್ಡ್ ಕೈಬಿಟ್ಟು ವಾರ್ಡ್‍ಗಳ ಸಂಖ್ಯೆಯನ್ನು ಆರಕ್ಕೆ ಇಳಿಸುವ ಮೂಲಕ ತಾರತಮ್ಯ ಮಾಡಲಾಗಿದೆ. ಹೀಗಾಗಿ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ವಾರ್ಡ್‍ಗಳನ್ನು ಪುನರ್ ರಚಿಸಿ 2022ರ ಜು.14ರಂದು ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ಹೊಸದಾಗಿ ವಾರ್ಡ್‍ಗಳನ್ನು ರಚಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಐತಿಹಾಸಿಕ ಕೆ.ಆರ್.ಮಾರ್ಕೆಟ್ ವಾರ್ಡ್ ಮರು ರಚಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News