'ಲಿಂಗಾಯತ ಪ್ರತ್ಯೇಕ ಧರ್ಮ' ವಿಚಾರದಲ್ಲಿ ಏನು ನಡೆಯಿತು ಎಂಬ ಸತ್ಯ ಜನತೆಗೆ ಗೊತ್ತಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು, ಆ. 20: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಪಶ್ಚಾತ್ತಾಪವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಲಿಂಗಾಯತ ಧರ್ಮದ ವಿಚಾರದಲ್ಲಿ ಏನಾಯಿತು ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇಲ್ಕಂಡ ವಿಷಯದ ಬಗ್ಗೆ ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದಿರುವ ಮಾತುಕತೆ ಅದು. ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಶ್ಚಾತ್ತಾಪವಾಗಿದೆ ಎಂದು ಹೇಳಿದ್ದಾರೆಂದು ಶ್ರೀಗಳು ತಿಳಿಸಿದ್ದಾರೆ.
ಅದಕ್ಕೆ ಸಿದ್ದರಾಮಯ್ಯ ಅವರೂ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ಅವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಆದರೆ, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಏನು ನಡೆಯಿತು ಎಂಬ ಸತ್ಯ ರಾಜ್ಯದ ಜನತೆಗೆ ಗೊತ್ತು. ಚುನಾವಣೆ ಸಂದರ್ಭದಲ್ಲಿ ಏನೆನೆಲ್ಲಾ ಮಾಡಿದ್ದಾರೆಂದು ಎಲ್ಲವನ್ನು ಜನತೆ ಕಂಡಿದೆ ಎಂದು ಅವರು ತಿಳಿಸಿದರು.
----------------------
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಈಗಾಗಲೇ ಸಿದ್ದರಾಮಯ್ಯ ಅವರಿಗೆ ಭ್ರದ್ರತೆಯನ್ನು ಹೆಚ್ಚಿಸುವಂತೆ ಆದೇಶ ಕೊಟ್ಟಿದ್ದೇನೆ.
-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ