×
Ad

ಸಚಿವ ಎಸ್.ಟಿ.ಸೋಮಶೇಖರ್ ಗೆ ಕಾಂಗ್ರೆಸ್‍ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ

Update: 2022-08-20 20:50 IST

ಮೈಸೂರು,ಆ.20: ಕೊಡಗು ಜಿಲ್ಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆಎಸೆದುದನ್ನು ಸಮರ್ಥಿಸಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಮೈಸೂರಿನಲ್ಲಿ ನಡೆಯಿತು.

ಮೈಸೂರಿನ ಕಲಾ ಮಂದಿರದಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಏರ್ಪಡಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮ ಮುಗಿಸಿ ಸಚಿವರು ತೆರಳುವ ವೇಳೆ ಕಲಾಮಂದಿರದ ಮುಖ್ಯದ್ವಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಎಸ್.ಟಿ.ಸೋಮಶೇಖರ್ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು.

ಈ ಬಗ್ಗೆ ಪೊಲೀಸರಿಂದ ಮಾಹಿತಿ ತಿಳಿದ ಸಚಿವರು ಕಲಾಮಂದಿರದ ಹಿಂಬಾಗಿಲಿನಿಂದ ತೆರಳುವ ವೇಳೆ ಕಾಂಗ್ರೆಸ್ ಮುಖಂಡರಾದ ಎನ್.ಭಾಸ್ಕರ್, ಮಾಧ್ಯಮ ವಕ್ತಾರ ಮಹೇಶ್‍ ವನೇತೃತ್ವದಲ್ಲಿ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಮತ್ತು ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಪ್ಪು ಬಾವುಟ ಪ್ರದರ್ಶಿಸಿದರಲ್ಲದೇ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ಅಲ್ಲಿಂದ ತೆರವುಗೊಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News