×
Ad

ACB ರದ್ದು ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ

Update: 2022-08-23 14:42 IST

ಬೆಂಗಳೂರು, ಆ.23: ಭ್ರಷ್ಟಾಚಾರ ನಿಗ್ರಹ ದಳವನ್ನು(ACB) ಕರ್ನಾಟಕ ಹೈಕೋರ್ಟ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿದೆ. ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ. 

ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂದೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. 

ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಬೆಸ್ಕಾಂನ ಇಬ್ಬರು ನೌಕರರ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಿಸಿದ್ದರು. ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಹಸ್ತಾಂತರಿಸಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿರುವುದರಿಂದ ತನಿಖೆಗೆ ತೊಂದರೆ ಆಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.  

ಸಾರ್ವಜನಿಕ ಸೇವೆಯಲ್ಲಿರುವ ಸರಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಗಳ ತನಿಖೆ ನಡೆಸಲು 2016ರಲ್ಲಿ ರಚಿಸಲಾಗಿದ್ದ ಎಸಿಬಿಯನ್ನು 2022ರ ಆ. 11ರಂದು ರದ್ದುಗೊಳಿಸಿದ್ದ ಹೈಕೋರ್ಟ್, ಎಸಿಬಿ ವ್ಯಾಪ್ತಿಯಲ್ಲಿ ಸದ್ಯ ತನಿಖೆಗೆ ಒಳಪಟ್ಟಿರುವ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ಮಹತ್ವದ ತೀರ್ಪು ನೀಡಿತ್ತು. 

ರಾಜ್ಯ ಸರಕಾರ 2016ರ ಮಾರ್ಚ್ 19ರಂದು ಎಸಿಬಿ ರಚನೆ ಮಾಡಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯ, ಬೆಂಗಳೂರು ವಕೀಲರ ಸಂಘ ಮತ್ತು ವಕೀಲ ಬಿ.ಜಿ. ಚಿದಾನಂದ ಅರಸ್ ಸೇರಿದಂತೆ 15 ಜನರು ಸಲ್ಲಿಸಿದ್ದ ಪ್ರತ್ಯೇಕ ರಿಟ್ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿತ್ತು.

ಇದನ್ನೂ ಓದಿ: ಎಸಿಬಿಯಲ್ಲಿ ದಾಖಲಾಗಿರುವ ಹಲವು ದೂರುಗಳು ಇನ್ನೂ ತನಿಖೆ ಹಂತದಲ್ಲಿವೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News