×
Ad

ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರದಲ್ಲಿ ಜಾಗ ಗುರುತಿಸಿ: ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

Update: 2022-08-23 20:20 IST
ಸಾಂದರ್ಭಿಕ ಚಿತ್ರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರಕಾರದಿಂದ ಮಂಜೂರಾ ಗಿರುವ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಿರುವ ಜಮೀನನ್ನು ಆದಷ್ಟು  ಶೀಘ್ರದಲ್ಲಿ ಗುರುತಿಸಿ, ಆಸ್ಪತ್ರೆ ಕಾಮಗಾರಿ ಆರಂಭಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ತಿಳಿಸಿದ್ದಾರೆ. 

ಮಂಗಳವಾರ ಬೆಂಗಳೂರಿನಿಂದ ವೀಡಿಯೋ ಸಂವಾದದ ಮೂಲಕ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲೆಗೆ ಈಗಾಗಲೇ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳುವಂತೆ ಸೂಚಿಸಿದ ಅವರು, ಇಎಸ್‌ಐ ಔಷಧಾಲಯ ಸ್ಥಾಪನೆಗೆ ಸೂಕ್ತ ಸ್ಥಳವನ್ನು ಗುರುತಿಸುವಂತೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಇರುವ ಕಾಲುಸಂಕಗಳನ್ನು ಗುರುತಿಸಿ, ಆ ಭಾಗದಲ್ಲಿ ಸೇತುವೆಗಳನ್ನು ನಿರ್ಮಿಸಲು ಆದ್ಯತೆಯ ಮೇರೆಗೆ ಕಾರ್ಯೋನ್ಮುಖ ರಾಗುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆ ಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳ್ಳುವ ಹಾಗೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯ ಗೊಳಿಸಲು ಎಲ್ಲಾ ಕಾಮಗಾರಿಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ವಿಶೇಷ ಗಮನಹರಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಅತಿವೃಷ್ಠಿ ಯಿಂದ ಹಾನಿಯಾಗಿರುವ 190 ಶಾಲೆ ಹಾಗೂ 70 ಅಂಗನವಾಡಿ ಕೇಂದ್ರಗಳ ದುರಸ್ಥಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಹಾನಿಯಾದ ರಸ್ತೆಗಳ ಸಣ್ಣ-ಪುಟ್ಟ ದುರಸ್ಥಿ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಾನ್ಸೂನ್‌ನಿಂದ ಉಂಟಾಗಿರುವ ಹಾನಿ ಹಾಗೂ ಪ್ರಸ್ತುತ  ಇರುವ ಸ್ಥಿತಿಗತಿಗಳ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿ,  ನೆರೆ-ಪ್ರವಾಹದಂತಹ ಸಂದಿಗ್ದತೆಯನ್ನು ಎದುರಿಸಲು ಜಿಲ್ಲಾಡಳಿತ ಮಾನ್ಸೂನ್ ಪ್ರಾರಂಭ ದಲ್ಲಿಯೇ ಕಾರ್ಯತಂತ್ರವನ್ನು ರೂಪಿಸಿದ್ದು, ಅದರಂತೆ ಪ್ರಾಕೃತಿಕ ವಿಕೋಪಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಸಭೆಯಲ್ಲಿ ನೀಡಿರುವ ನಿರ್ದೇಶನದಂತೆ ಕಾರ್ಯನಿರ್ವಹಿಸಲಾಗಿದೆ ಎಂದರು.

ಅದರಂತೆ ವಿಪತ್ತು ನಿರ್ವಹಣೆ ಕಾರ್ಯದಲ್ಲಿ ವಿವಿಧ ಇಲಾಖೆಗಳಿಗೆ  ತುರ್ತು ಅಗತ್ಯವಿರುವ ಬೋಟು, ಲೈಫ್‌ಜಾಕೆಟ್ ಮತ್ತಿತ್ತರ ಉಪಕರಣಗಳನ್ನು ನಿಯಮಾನುಸಾರ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದ್ದು, ಅದರಂತೆ ಸಂಬಂಧಿತ ಇಲಾಖೆಗಳಿಗೆ ಹಸ್ತಾಂತರಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಪ್ರಸ್ತುತ ಆಗಸ್ಟ್ ತಿಂಗಳಲ್ಲಿ ಮಳೆಯ ಪ್ರಮಾಣ ತಗ್ಗಿ ಯಥಾಸ್ಧಿತಿ ಮುಂದುವರಿ ದಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಮಳೆಯಿಂದ ಹಾನಿಗೊಂಡ ಮನೆಗಳ ವಿವರಗಳನ್ನು ಕಾಲಕಾಲಕ್ಕೆ ರಾಜೀವಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗುತ್ತಿದ್ದು, ಈ ಹಿಂದೆ 2019, 2020, 2021ರ ಸಾಲಿನಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಲಾಗುತ್ತಿದೆ ಎಂದು   ಜಿಲ್ಲಾಧಿಕಾರಿ ವಿವರಿಸಿದರು. 

404 ಕಾಲುಸಂಕ ನಿರ್ಮಾಣಕ್ಕೆ ಅನುಮತಿ: ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಶಾಲಾ ಬಾಲಕಿ ಕಾಲುಸಂಕ ದಾಟುವ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಈ ಸಂಬಂಧ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಲುಸಂಕ ಅಗತ್ಯವಿರುವ ನದಿ ಪ್ರದೇಶಗಳಲ್ಲಿ ಸುಮಾರು 404 ಸ್ಧಳಗಳಲ್ಲಿ ಕಾಲು ಸಂಕ ನಿರ್ಮಾಣ ಮಾಡಲು ಸರಕಾರದಿಂದ ಅನುಮೋದನೆ ದೊರೆತಿರುವುದಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಮಾಹಿತಿ ನೀಡಿದರು.

ಇದರಲ್ಲಿ 235 ಕಾಮಗಾರಿಗಳ ಟೆಂಡರ್ ಹಂತ ಮುಕ್ತಾಯಗೊಂಡಿರುವುದಾಗಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದರು. ಉಳಿದ ಕಾಮಗಾರಿಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಕಾರ್ಯಗಳನ್ನು 15 ದಿನಗಳೊಳಗೆ ಮುಕ್ತಾಯಗೊಳಿಸಿ, ಅತೀ ಶೀಘ್ರದಲ್ಲಿ ಅಗತ್ಯ ಕಾಲುಸಂಕಗಳ ನಿರ್ಮಾಣ ಕಾರ್ಯವನ್ನು ಆದ್ಯತೆಯ ಮೇರೆಗೆ, ವಿಶೇಷ  ಮುತ್ತವರ್ಜಿ ವಹಿಸಿ ನಿರ್ವಹಿಸಲು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್‌ಗೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸೇರಿದಂತೆ ಜಿಲ್ಲೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News