ಆ.25: ಉಡುಪಿ ಜಿಲ್ಲೆ ರಜತ ಮಹೋತ್ಸವಕ್ಕೆ ರಾಜ್ಯಪಾಲರಿಂದ ಚಾಲನೆ
ಉಡುಪಿ : ಉಡುಪಿ ಜಿಲ್ಲೆ ಅಸ್ತಿತ್ವಕ್ಕೆ ಬಂದು ಗುರುವಾರ (ಆ.25) 25 ವರ್ಷ ಪೂರ್ಣಗೊಳ್ಳಲಿದ್ದು, ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಸಂಜೆ 5ಗಂಟೆಗೆ ಉದ್ಘಾಟಿಸಲಿದ್ದಾರೆ.
ಗುರುವಾರ ಅಪರಾಹ್ನ ಉಡುಪಿಗೆ ಆಗಮಿಸುವ ರಾಜ್ಯಪಾಲರು, ಅಪರಾಹ್ನ ೧೨:೪೫ಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ ೫:೦೦ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಉಡುಪಿ ಜಿಲ್ಲಾ ರಜತ ಮಹೋತ್ಸವವನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ೭:೦೦ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.
ಅದ್ದೂರಿ ಮೆರವಣಿಗೆ: ರಜತ ಮಹೋತ್ಸವ ಕಾರ್ಯಕ್ರಮಗಳು ಅಪರಾಹ್ನ ೨:೩೦ಕ್ಕೆ ಪ್ರಾರಂಭಗೊಳ್ಳಲಿದ್ದು, ನಗರದ ಬೋರ್ಡ್ ಹೈಸ್ಕೂಲ್‌ನಿಂದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ೩:೩೦ರಿಂದ ಸಂಜೆ ೫:೦೦ಗಂಟೆಯವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸಂಜೆ ೫:೦೦ಕ್ಕೆ ರಾಜ್ಯಪಾಲರು ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್ ಅಲ್ಲದೇ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಉಪಸ್ಥಿತರಿರುವರು. ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲೆ ಉದಯದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಪ್ರಸ್ತುತ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ೧೯೯೭ರಲ್ಲಿ ಜಿಲ್ಲೆಯಲ್ಲಿ ಶಾಸಕರಾಗಿದ್ದ ಕೆ.ಪ್ರತಾಪ್‌ಚಂದ್ರ ಶೆಟ್ಟಿ ಹಾಗೂ ಯು.ಆರ್.ಸಭಾಪತಿ ಅವರು ಭಾಗವಹಿಸಲಿದ್ದಾರೆ.
ಸಂಜೆ ೭:೦೦ಗಂಟೆಗೆ ಹೆಸರಾಂತ ಸಂಗೀತ ಸಂಯೋಜಕ ಮತ್ತು ನಿರ್ದೇಶಕ ಅರ್ಜುನ್ ಜನ್ಯ ಜೊತೆಗೆ ಸರಿಗಮಪ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು, ಸಂಘ- ಸಂಸ್ಥೆಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.