ಸೆ.2ರಂದು ಮಂಗಳೂರಿಗೆ ಪ್ರಧಾನಿ ಭೇಟಿ ಕಾರ್ಯಕ್ರಮ: ಅಗತ್ಯ ಕ್ರಮಕ್ಕೆ ಉಸ್ತುವಾರಿ ಸಚಿವ ಸೂಚನೆ
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಅಂದಾಜು 4,500 ಕೋ.ರೂ.ಗಳಿಗೂ ಅಧಿಕ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ನಗರ ಹೊರವಲಯದ ಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಸರಕಾರಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಹಾಗಾಗಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.
ನಗರಕ್ಕೆ ಪ್ರಧಾನ ಮಂತ್ರಿಗಳ ಭೇಟಿಯ ಹಿನ್ನಲೆಯಲ್ಲಿ ಪೂರ್ವಭಾವಿ ಸಿದ್ದತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಗುರುವಾರ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಪಟ್ಟಿ ತಯಾರಿಸಬೇಕು ಮತ್ತು ಫಲಾನುಭವಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಫಲಾನುಭವಿಗಳನ್ನು ಕರೆತರುವ ಹಾಗೂ ವಾಪಸ್ಸು ಕಳುಹಿಸಿಕೊಡಲು ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಮಾಡಿಕೊಡಬೇಕು. ಸಂಜೆ 4ಕ್ಕೆ ಪ್ರಧಾನಿ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸುವ ಮುನ್ನವೇ ಸಾರ್ವಜನಿಕರು ಹಾಗೂ ಫಲಾನುಭವಿಗಳು ಉಪಸ್ಥಿತರಿರುವಂತೆ ನೋಡಿಕೊಳ್ಳಬೇಕು ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಕೇಂದ್ರ ಪುಸ್ಕೃತ ಸಾಕಷ್ಟು ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿವೆ. ಲಕ್ಷಾಂತರ ಫಲಾನುಭವಿಗಳು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಮತ್ಸ್ಯ ಸಂಪದ ಯೋಜನೆಯ ಬಗ್ಗೆ ಪ್ರಧಾನಿ ವಿಶೇಷ ಆಸಕ್ತಿ ವಹಿಸಿದ್ದಾರೆ, ಮೀನುಗಾರಿಕಾ ಇಲಾಖೆಯಿಂದ ಆ ಫಲಾನುಭವಿಗಳನ್ನು ಆಹ್ವಾನಿಸಬೇಕು ಎಂದರು.
ದ.ಕ.ಜಿಲ್ಲಾಧಿಕಾರಿಡಾ.ರಾಜೇಂದ್ರ ಕೆ.ವಿ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಪಂ ಸಿಇಒಡಾ.ಕುಮಾರ್, ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶಕುಮಾರ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ನವ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ.ವೆಂಕಟರಮಣ ಅಕ್ಕರಾಜು, ಪ್ರಾಧಿಕಾರದ ಅಧಿಕಾರಿ ಹರಿನಾಥ್ ಮತ್ತಿತರರು ಉಪಸ್ಥಿತರಿದ್ದರು.