×
Ad

ಪ್ರಧಾನಿ ಮಂಗಳೂರು ಭೇಟಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಸಚಿವ ಸುನಿಲ್‌ ಕುಮಾರ್

Update: 2022-08-26 21:36 IST

ಉಡುಪಿ : ತಾನು ದ.ಕ. ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಥಮ ಕಾರ್ಯಕ್ರಮ ಸೆ.2ರಂದು ಮಂಗಳೂರಿನ ಗೋಲ್ಡ್‌ಪಿಂಚ್ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ದ.ಕ ಜಿಲ್ಲೆಯಿಂದ ಸುಮಾರು 80 ಸಾವಿರ ಹಾಗೂ ಉಡುಪಿ ಜಿಲ್ಲೆಯಿಂದ ಸುಮಾರು 20 ಸಾವಿರ ಮಂದಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.  

ಶುಕ್ರವಾರ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪ್ರಧಾನಿ ಮಂಗಳೂರು ಭೇಟಿ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ಮೋದಿ ಅವರ ಮೊದಲನೇ ಸರಕಾರಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲು ಯೋಜನೆಯನ್ನು ರೂಪಿಸಲಾಗಿದೆ. ಚುನಾವಣೆಗೆ ಸಂಬಂಧಿಸಿ ಉಭಯ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರೂ, ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ ನೀಡುವ ಸರಕಾರಿ ಕಾರ್ಯಕ್ರಮ ಇದಾಗಿದೆ ಎಂದರು.

ಸೆ.2ರ ಅಪರಾಹ್ನ 2.30ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಪ್ರಧಾನಿ ಮೋದಿ ಸಂಜೆ 4 ಗಂಟೆಗೆ ಆಗಮಿಸಲಿದ್ದಾರೆ. ಗೋಲ್ಡ್‌ಪಿಂಚ್ ಮೈದಾನದಲ್ಲಿ ಸುಮಾರು 1 ಲಕ್ಷ ಮಂದಿ ಸೇರಲಿದ್ದು, ಪ್ರಧಾನಿ ಆಗಮಿಸುವ ದಾರಿಯಲ್ಲಿ ಸುಮಾರು 2 ಕೀ.ಮೀ ಉದ್ದಕ್ಕೆ ಸುಮಾರು 15 ಸಾವಿರ ಮಂದಿಯನ್ನು ಸೇರಿಸಿ ರೋಡ್ ಶೋ ಮಾಡಲು ಸಿದ್ಧತೆಗಳನ್ನು ನಡೆಸಲಾಗಿದೆ ಎಂದವರು ಹೇಳಿದರು.

ಈಗಾಗಲೇ ಸರಕಾರಿ ಅಧಿಕಾರಿಗಳ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಪ್ರತೀ ಗ್ರಾಪಂ ವ್ಯಾಪ್ತಿಯಲ್ಲಿ ಶೇ.೫೦ಕ್ಕೂ ಹೆಚ್ಚು ಮನೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದಾದರೊಂದು ಯೋಜನೆಗಳು ತಲುಪಿರುವ ಹಿನ್ನೆಲೆಯಲ್ಲಿ ಅಂತಹ ಫಲಾನುಭವಿಗಳನ್ನು ಕೂಡಾ ಈ ಸಮಾವೇಶದಲ್ಲಿ ಜೋಡಿಸಿಕೊಳ್ಳಲು ಸಿದ್ಧತೆಗಳನ್ನು ನಡೆಸಲಾಗಿದೆ. ಉಭಯ ಜಿಲ್ಲೆಗಳಲ್ಲಿ ಯೋಜನಾಬದ್ಧ ಪೂರ್ವ ಸಿದ್ದತಾ ಸಭೆಗಳ ಮೂಲಕ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಸೆ.2ರ ಪ್ರಧಾನಿ ಮೋದಿ ಅವರ ಮಂಗಳೂರಿನ ಐತಿಹಾಸಿಕ ಸಮಾವೇಶದಲ್ಲಿ ಸುಮಾರು 15 ಸಾವಿರ ಮೇಲ್ಪಟ್ಟು ಮಂದಿ ಭಾಗವಹಿಸಲು ಜಿಲ್ಲಾದ್ಯಂತ ಆ.27, 28 ಮತ್ತು 29ರಂದು ಬೈಂದೂರು, ಕುಂದಾಪುರ, ಕಾಪು, ಕಾರ್ಕಳ, ಉಡುಪಿ ಗ್ರಾಮಾಂತರ ಮತ್ತು ಉಡುಪಿ ನಗರ ಮಂಡಲಗಳ ಪೂರ್ವ ಸಿದ್ಧತಾ ಸಭೆಗಳು ನಡೆಯಲಿವೆ ಎಂದು ವಿವರಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ ಕಲ್ಮಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸತ್ಯಾನಂದ ನಾಯಕ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News