ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ; ನಾಳೆ (ಆ.27) ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ ಬೊಮ್ಮಾಯಿ
Update: 2022-08-26 23:07 IST
ಬೆಂಗಳೂರು, ಆ. 26: ‘ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದ ಅಡ್ವೋಕೇಟ್ ಜನರಲ್ ಸೇರಿದಂತೆ ಅಧಿಕಾರಿಗಳೊಂದಿಗೆ ನಾಳೆ(ಆ.27) ತನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟ. ಹೀಗಾಗಿ ಹೈಕೋರ್ಟ್ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಎಲ್ಲರ ಭಾವನೆಗಳಿಗೆ ಸ್ಪಂದಿಸಲು ಸರಕಾರ ನಾಳೆ ಚರ್ಚಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಿದೆ' ಎಂದು ತಿಳಿಸಿದರು.
'ಸಮಾಜದಲ್ಲಿ ಶಾಂತಿಯನ್ನು ಕಾಪಾಡುವ ಜೊತೆ ಎಲ್ಲರ ಮನದಾಳದ ಇಚ್ಛೆಯನ್ನು ಈಡೇರಿಸುವ ಕೆಲಸವನ್ನು ಸರ್ಕಾರ ಮಾಡುತ್ತದೆ' ಎಂದು ತಿಳಿಸಿದರು.