ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣರ ವಿರುದ್ಧ FIR

Update: 2022-08-27 07:15 GMT

ಮೈಸೂರು, ಆ. 27: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ನೊಂದ ವಿದ್ಯಾರ್ಥಿನಿಯರು ಮೈಸೂರಿನಲ್ಲಿ ದೂರು ಸಲ್ಲಿಸಿದ್ದಾರೆ.

ಚಿತ್ರದುರ್ಗದ ಬ್ರುಹನ್ಮಠದ ಡಾ.ಶಿವಮೂರ್ತಿ ಶರಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮೈಸೂರಿನ ನಝರ್ ಬಾದ್ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಮಠದ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿರುವ  ವಿದ್ಯಾರ್ಥಿನಿಯರನ್ನು ಅಲ್ಲಿನ ವಾರ್ಡನ್ ಸ್ವಾಮೀಜಿ ಬಳಿ ಹಣ್ಣು ತೆಗೆದುಕೊಂಡು ಹೋಗುವಂತೆ ಒತ್ತಾಯ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರಿಗೆ ಮತ್ತು ಬರುವಂತೆ ಮಾಡಿ ಸ್ವಾಮೀಜಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಸಂತ್ರಸ್ತೆ ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದಾರೆ.

ಸ್ವಾಮೀಜಿಯ ಕಿರುಕುಳ ತಾಳಲಾರದೆ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರಿಗೆ ಹೋಗಿ ಅಲ್ಲಿಂದ ಮೈಸೂರಿನ ಒಡನಾಡಿ ಸಂಸ್ಥೆಗೆ ಬಂದು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ತಕ್ಷಣ ಒಡನಾಡಿಯ ಸ್ಟ್ಯಾನ್ಲಿ ಅವರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿದ್ದಾರೆ. ನಂತರ ಮಕ್ಕಳ ಸಮಿತಿ ಅಧಿಕಾರಿಗಳು ನಝರ್ ಬಾದ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಈ ಸಂಬಂಧ ಫೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:  ಚಿತ್ರದುರ್ಗ: ಕಾರು-ಲಾರಿ ಢಿಕ್ಕಿ; ಮೂವರು ಮೃತ್ಯು, ಮೂವರಿಗೆ ಗಂಭೀರ ಗಾಯ

--------------------------------------------------------

ಈ ಪ್ರಕರಣದಲ್ಲಿ ಭಾಗಿಯಾಗಿರುವ ಸ್ವಾಮೀಜಿ ಪ್ರಭಾವಿ ವ್ಯಕ್ತಿಯಾಗಿದ್ದು, ಹಾಗೂ ಸರ್ಕಾರ ಸ್ಥಳೀಯ ಪೊಲೀಸರಿಂದ ತನಿಖೆ ನಡೆಸದೆ ಉನ್ನತ ಮಟ್ಟದ ಅಧಿಕಾರಿಗಳ ಮೂಲಕ ತನಿಖೆ ನಡೆಸಬೇಕು ಎಂದು ಒಡನಾಡಿಯ ಸಂಸ್ಥೆಯ ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ.

ಈ ಸಂಬಂಧ 'ವಾರ್ತಾಭಾರತಿ' ಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಮಠದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅಲ್ಲಿನ ಸ್ವಾಮೀಜಿಯಿಂದ ಆಗುತ್ತಿರುವ ಲೈಂಗಿಕ ಕಿರುಕುಳವನ್ನು ತಿಳಿಸಿದ್ದಾರೆ. ಆ ಮಕ್ಕಳಿಗೆ ಜೀವ ಭಯ ಇರುವುದರಿಂದ ಅವರು ನಮ್ಮ ಸಂಸ್ಥೆಯಲ್ಲೇ ಆಶ್ರಯ ಪಡೆದಿದ್ದಾರೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮವನ್ನು ತಕ್ಷಣ  ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News