ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಸುಪ್ರೀಂಕೋರ್ಟ್‌ ಅನುಮತಿ ನಿರಾಕರಣೆ, ಯಥಾಸ್ಥಿತಿ ಕಾಪಾಡಲು ಸೂಚನೆ

Update: 2022-08-30 18:42 GMT

ಹೊಸದಿಲ್ಲಿ,ಆ.30: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಂಗಳವಾರ ಅನುಮತಿಯನ್ನು ನಿರಾಕರಿಸಿರುವ ಸರ್ವೋಚ್ಚ ನ್ಯಾಯಾಲಯವು,ಈ ವಿಷಯದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ. ಇದು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ವಿಭಾಗಿಯ ಪೀಠದ ಆದೇಶವನ್ನು ಬುಡಮೇಲುಗೊಳಿಸಿದೆ.

ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ,ಎ.ಎಸ್.ಓಕಾ ಮತ್ತು ಎಂ.ಎಂ.ಸುಂದರೇಶ ಅವರನ್ನೊಳಗೊಂಡ ಪೀಠವು ಕರ್ನಾಟಕ ಉಚ್ಚ ನ್ಯಾಯಾಲಯವು ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಮಂಡಳಿಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿತು.

ತುರ್ತು ವಿಚಾರಣೆಯನ್ನು ಕೋರಿದ್ದ ಹಿರಿಯ ನ್ಯಾಯವಾದಿ ಕಪಿಲ ಸಿಬಲ್ ಅವರು ಅರ್ಜಿಯನ್ನು ಉಲ್ಲೇಖಿಸಿದ್ದರು. ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ಬಗ್ಗೆ ಸರ್ವೋಚ್ಚ ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಅವರು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದರೆ ಅನಗತ್ಯ ಉದ್ವಿಗ್ನತೆ ಸೃಷ್ಟಿಯಾಗುತ್ತದೆ ಎಂದು ತಿಳಿಸಿದರು.

ಗಣೇಶೋತ್ಸವಕ್ಕೆ ಈದ್ಗಾ ಮೈದಾನದ ಬಳಕೆಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪರಿಶೀಲಿಸಲು ಮತ್ತು ಸೂಕ್ತ ನಿರ್ದೇಶನಗಳನ್ನು ಹೊರಡಿಸಲು ಕರ್ನಾಟಕ ಉಚ್ಚ ನ್ಯಾಯಾಲಯವು ರಾಜ್ಯ ಸರಕಾರಕ್ಕೆ ಅನುಮತಿ ನೀಡಿತ್ತು. ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಏಕ ನ್ಯಾಯಾಧೀಶ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರಕಾರವು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿತ್ತು.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ತಾನು ಅವಕಾಶ ನೀಡುವುದಿಲ್ಲ ಎಂದು ಎಸ್ಡಿಪಿಐ ಪ್ರಕಟಿಸಿದ ಬಳಿಕ ವಿವಾದ ಭುಗಿಲೆದ್ದಿತ್ತು. ಈದ್ಗಾ ಮೈದಾನ ಪ್ರದೇಶದ ಸುತ್ತ ಬಿಗುಭದ್ರತೆಯನ್ನು ಏರ್ಪಡಿಸಿದ್ದು,ಭದ್ರತಾ ಪಡೆಗಳು ಧ್ವಜ ಸಂಚಲನ ನಡೆಸುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News