ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ

Update: 2022-08-30 13:31 GMT

ಬೆಂಗಳೂರು, ಆ.30: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ. ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಕುರಿತಂತೆ ನಿರ್ಧರಿಸುವ ಅಧಿಕಾರವನ್ನು ಹು-ಧಾ ಪಾಲಿಕೆ ಆಯುಕ್ತರಿಗೆ ನೀಡಿ ಆದೇಶಿಸಿದೆ. 

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿ ಪಾಲಿಕೆಯ ಸದನ ಸಮಿತಿ ರಚನೆ ಪ್ರಶ್ನಿಸಿ ಹುಬ್ಬಳ್ಳಿಯ ಅಂಜುಮಾನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಆದೇಶ ನೀಡಿದೆ.

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಸದನ ಸಮಿತಿಯು ಸೋಮವಾರ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶ್ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿತ್ತು. ವಕೀಲರ ವಾದ ಆಲಿಸಿದ ನ್ಯಾಯಪೀಠ, ಮೈದಾನದಲ್ಲಿ ಗಣೇಶ ಕೂರಿಸುವುದು ಈಗ ಪಾಲಿಕೆ ಆಯುಕ್ತರಿಗೆ ಬಿಟ್ಟ ವಿಚಾರ ಎಂದಿದೆ. 

ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಪೀಠ, ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಆದೇಶ ಪ್ರಕಟವಾದ ಬಳಿಕ ಅರ್ಜಿದಾರರು ಕೋರ್ಟ್ ಗೆ  ಬರಬಹುದು ಎಂದು ತಿಳಿಸಿತು.

► ಪೊಲೀಸ್ ಭದ್ರತೆ 

ಹುಬ್ಬಳ್ಳಿ ಈದ್ಗಾ ಮೈದಾನದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದರ ಜೊತೆ ಪ್ಯಾರಾ ಮಿಲಿಟರಿ ಪಡೆಯನ್ನು ನಿಯೋಜನೆ ಮಾಡಲಾಗಿದೆ. ಈದ್ಗಾ ಮೈದಾನವನ್ನು ಎರಡು ಭಾಗವಾಗಿ ಇಬ್ಭಾಗ ಮಾಡಲಾಗಿದ್ದು, ಗಣೇಶೋತ್ಸವ ಮಾಡಲು ನಿಗದಿಪಡಿಸಿದ ಸ್ಥಳವನ್ನು ಪ್ರತ್ಯೇಕಿಸಿ ಬ್ಯಾರಿಕೇಡ್ ಹಾಕಲಾಗಿದೆ.

ಈದ್ಗಾ ಆವರಣದ ಒಳಗೆ ಮತ್ತು ಈದ್ಗಾ ಆವರಣದ ಹೊರಗೆ ಎಸಿಪಿ ಮಟ್ಟದ ಅಧಿಕಾರಿಗಳಿಂದ ಭದ್ರತೆಯನ್ನು ಒದಗಿಸಲಾಗಿದೆ. ಮೈದಾನದ ಸುತ್ತ ಪೊಲೀಸರು ಅಲರ್ಟ್ ಆಗಿದ್ದಾರೆ. ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಉತ್ಸವಕ್ಕೆ ಸದನ ಸಮಿತಿಯು ಅವಕಾಶ ನೀಡಿದೆ. ಹೈಕೋರ್ಟ್ ಆದೇಶದಂತೆ ಈಗ ಹು-ಧಾ ಪಾಲಿಕೆ ಆಯುಕ್ತರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News