ಮಂಗಳೂರು, ಗೋವಾ ವಿವಿ ವಿಶ್ರಾಂತ ಕುಲಪತಿ, ಇತಿಹಾಸ ತಜ್ಞ ಪ್ರೊ.ಬಿ.ಶೇಖ್ ಅಲಿ ನಿಧನ
Update: 2022-09-01 13:40 IST
ಮೈಸೂರು, ಸೆ.1: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಗೋವಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಇತಿಹಾಸ ತಜ್ಞ ಪ್ರೊ.ಬಿ.ಶೇಖ್ ಅಲಿ (98) ಗುರುವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.
ಮೃತರು ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಟಿಪ್ಪು ಸರ್ಕಲ್ ಬಳಿ ಇರುವ ಖಬರ್ ಸ್ಥಾನದಲ್ಲಿ ಇಂದು ಸಂಜೆ 6 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ: ವಿಶ್ರಾಂತ ಕುಲಪತಿ ಪ್ರೊ.ಬಿ.ಶೇಖ್ ಅಲಿ ನಿಧನಕ್ಕೆ ಶಾಸಕ ತನ್ವೀರ್ ಸೇಠ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.